ಲೋಕಭೆಯ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಮಂಗಳವಾರ (ಜೂನ್ 25) ಈ ವಿಷಯವನ್ನು ತಿಳಿಸಿದ್ದಾರೆ.
ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ಲೋಕಸಭೆಯ ಹಂಗಾಮಿ ಸ್ಪೀಕರ್ ಭರ್ತ್ರಿಹರಿ ಮಹತಾಬ್ ಅವರಿಗೆ ಪತ್ರ ಬರೆದು ರಾಹುಲ್ ಗಾಂಧಿಯವರನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ ನಿರ್ಧಾರವನ್ನು ತಿಳಿಸಿದ್ದಾರೆ. ಉಳಿದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು ಎಂದು ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ತನ್ನ ಸಂಸದೀಯ ಪಕ್ಷದ ಸಭೆಯಲ್ಲಿ ರಾಹುಲ್ ಗಾಂಧಿಯವರನ್ನು ವಿಪಕ್ಷ ನಾಯಕನನ್ನಾಗಿ ನೇಮಿಸಿ ಈಗಾಗಲೇ ನಿರ್ಧಾರ ಕೈಗೊಂಡಿತ್ತು. ಇಂಡಿಯಾ ಒಕ್ಕೂಟದ ಇತರ ಪಕ್ಷಗಳ ನಾಯಕರ ಸಹಮತವೂ ಈ ನಿರ್ಧಾರಕ್ಕೆ ಬೇಕಿತ್ತು. ನಿನ್ನೆ ಮಲ್ಲಿಕಾರ್ಜುನ ಖರ್ಗೆಯವರ ದೆಹಲಿಯ ನಿವಾಸದಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿಯನ್ನು ವಿಪಕ್ಷ ನಾಯಕನನ್ನಾಗಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.
ಐದು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ರಾಹುಲ್ ಗಾಂಧಿ ಪ್ರಸ್ತುತ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 2024ರ ಚುನಾವಣೆಯಲ್ಲಿ ಕೇರಳದ ವಯನಾಡ್ ಮತ್ತು ರಾಯ್ ಬರೇಲಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದ ಅವರು, ವಯನಾಡ್ ಕ್ಷೇತ್ರವನ್ನು ಸಹೋದರಿ ಪ್ರಿಯಾಂಕಾ ಗಾಂಧಿಗೆ ಬಿಟ್ಟುಕೊಟ್ಟು ರಾಯ್‌ಬರೇಲಿಯನ್ನು ಉಳಿಸಿಕೊಂಡಿದ್ದಾರೆ.
ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಮಂಗಳವಾರ (ಜೂನ್ 24) ಪ್ರಮಾಣ ವಚನ ಸ್ವೀಕರಿಸುವ ಮೂಲಕ ರಾಹುಲ್ ಗಮನ ಸೆಳೆದಿದ್ದರು.
ಇದನ್ನೂ ಓದಿ : ಲೋಕಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್


