ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ಪಕ್ಷ ಕರೆ ನೀಡಿತ್ತು. ಈ ನಿಟ್ಟಿನಲ್ಲಿ ಮೆರವಣಿಗೆ ಹೊರಟಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ಮಹಾರಾಣಿ ಕಾಲೇಜು ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ.
ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ಕಾಂಗ್ರೆಸ್ ಕಾರ್ಯಕರ್ತರು, ಫ್ರೀಡಂ ಪಾರ್ಕ್ನಲ್ಲಿ ಜಮಾವಣೆಗೊಂಡರು. ಅಲ್ಲಿ ನಡೆದ ಪ್ರತಿಭಟನಾ ಸಭೆಯ ಬಳಿಕ ಪಕ್ಷದ ನಾಯಕರ ನೇತೃತ್ವದಲ್ಲಿ ರಾಜಭವನದತ್ತ ಹೊರಟರು. ಈ ವೇಳೆ ಪೊಲೀಸರು ಎಲ್ಲರನ್ನೂ ತಡೆದು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಕೃಷಿ ಕಾಯ್ದೆಗಳ ಪರ ಇರುವವರ ಅಭಿಪ್ರಾಯ ಬದಲಾಗಬಹುದು: ಸುಪ್ರೀಂ ಸಮಿತಿ ಪರ ಬ್ಯಾಟಿಂಗ್ ಮಾಡಿದ…
ಫ್ರೀಡಂ ಪಾರ್ಕ್ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ ಡಿ.ಕೆ. ಶಿವಕುಮಾರ್, “ಮೂರು ಮರಣಶಾಸನಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದೀರಿ. ಪ್ರಧಾನಮಂತ್ರಿ ಗಮನ ಸೆಳೆಯಲು ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ರೈತರಿಗೆ ಬೆಂಬಲ ವ್ಯಕ್ತಪಡಿಸಿ ಈ ಹೋರಾಟ ನಡೆಯುತ್ತಿದೆ. ಇದೊಂದು ಐತಿಹಾಸಿಕ ಹೋರಾಟ” ಎಂದು ಹೇಳಿದರು.
“ಹೋರಾಟ ನಮ್ಮ ಉಸಿರು. ಪ್ರತಿಭಟನೆ ಹಕ್ಕು ಕಸಿಯುವ ಅಧಿಕಾರ ಯಾರಿಗೂ ಇಲ್ಲ. ಹೀಗಾಗಿ ಪೊಲೀಸರು ಎಲ್ಲಿ ತಡೆಯುತ್ತಾರೋ ಅಲ್ಲೇ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿ, ರಸ್ತೆ ಬಂದ್ ಮಾಡಿ” ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ಕರೆ ನೀಡಿದ್ದರು.
“ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ಮತ್ತು ಜನ ವಿರೋಧಿ ಕಾಯ್ದೆಗಳ ವಿರುದ್ಧದ ‘ರಾಜಭವನ ಚಲೋ’ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸುತ್ತಿರುವ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ನಿನ್ನೆ ರಾತ್ರಿಯಿಂದಲೇ ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆಯುತ್ತಿದ್ದಾರೆ. ಆ ಮೂಲಕ ರಾಜ್ಯ ಬಿಜೆಪಿ ಸರಕಾರ ದೌರ್ಜನ್ಯ ಮೆರೆಯುತ್ತಿದೆ” ಎಂದು ಶಿವಕುಮಾರ್ ಆರೋಪಿಸಿದ್ದರು.
ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ನಮ್ಮ ಸಾಂವಿಧಾನಿಕ ಹಕ್ಕು: ಸುಪ್ರೀಂಗೆ ಪರೋಕ್ಷ ಸಂದೇಶ ರವಾನಿಸಿದ ರೈತರು