ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
2026 ಜನವರಿ 23ರಂದು ನಡೆದ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿದೆ. ಪ್ರಕರಣದ ಗಂಭೀರತೆ ಮನವರಿಕೆಯಾದ ಹಿನ್ನಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಜನವರಿ 14 ರಂದು ಅಮೃತಾ ಗೌಡ ಅವರು ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ ಮತ್ತು ತಮ್ಮ ಭಾವಚಿತ್ರವಿರುವ ಬ್ಯಾನರ್ ತೆಗೆದಿದ್ದಕ್ಕಾಗಿ ದೂರವಾಣಿ ಮೂಲಕ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ ನಂತರ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಪರಾರಿಯಾಗಿದ್ದಾರೆ.
ಅವರನ್ನು ಅಮಾನತು ಮಾಡಿರುವ ಆದೇಶದಲ್ಲಿ, ಕಾಂಗ್ರೆಸ್ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಕೆ. ರೆಹಮಾನ್ ಖಾನ್, ವಿಷಯದ ಗಂಭೀರತೆಯನ್ನು ಪರಿಗಣಿಸಿ, ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿರುವುದಾಗಿ ಡೆಕನ್ ಹೆರಾಲ್ಡ್ ವರದಿ ಮಾಡಿದೆ.
ಘಟನೆ ನಡೆದು 10 ದಿನಗಳು ಕಳೆದರೂ ಪೊಲೀಸರಿಗೆ ಆತನನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ.


