ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅಕ್ಟೋಬರ್ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕಳೆದ 10 ದಿನಗಳಿಂದ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಕಸ್ಟಡಿಯಲ್ಲಿದ್ದ ಮುನಿರತ್ನ ಅವರನ್ನು ಇಂದು (ಅ.5) ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಮ್ಯಾಜಿಸ್ಟ್ರೇಟ್ ಕೆ.ಎನ್ ಶಿವಕುಮಾರ್ ಅವರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಲಂಚಕ್ಕೆ ಬೇಡಿಕೆ, ಜಾತಿ ನಿಂದನೆ ಪ್ರಕರಣಗಳಲ್ಲಿ ಜಾಮೀನು ಪಡೆದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಹೊರ ಬರುತ್ತಿದ್ದಂತೆ, ಅತ್ಯಾಚಾರ ಪ್ರಕರಣಲ್ಲಿ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದರು.
ಬಿಬಿಎಂಪಿ ಮಾಜಿ ಸದಸ್ಯ ವೇಲುನಾಯ್ಕರ್ ದಾಖಲಿಸಿರುವ ಜಾತಿ ನಿಂದನೆ, ಗುತ್ತಿಗೆದಾರ ಚೆಲುವರಾಜುವಿಗೆ ಲಂಚಕ್ಕೆ ಬೇಡಿಕೆ ಇಟ್ಟ ಸಂಬಂಧ ಬೆಂಗಳೂರಿನ ವೈಯಾಲಿಕಾವಲ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳಲ್ಲಿ ಮುನಿರತ್ನಗೆ ಜಾಮೀನು ದೊರೆತಿದೆ.
ಅತ್ಯಾಚಾರ ಆರೋಪ ಸಂಬಂಧ ರಾಮನಗರದ ಕಗ್ಗಲೀಪುರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರವು ಸೆಪ್ಟೆಂಬರ್ 21ರಂದು ಎಸ್‌ಐಟಿ ರಚಿಸಿದೆ.


