ಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರ್‌ಸಿಇಪಿ ಒಪ್ಪಂದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಆರ್‌ಸಿಇಪಿ ಬಗ್ಗೆ ಬರೆದು ಪೋಸ್ಟ್‌ ಮಾಡಿ, ಆರ್‌ಸಿಇಪಿ ಬೇಡ ಎಂದು ಹೇಳಿದ್ದಾರೆ.

ನವೆಂಬರ್‌ ೪ರಂದು ೧೬ ದೇಶಗಳ ನಡುವಿನ ಸಮಗ್ರ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲು ದಿನಾಂಕ ನಿಗದಿಪಡಿಸಲಾಗಿದೆ. ೧೦ ಆಗ್ನೇಯ ಏಷ್ಯಾ ದೇಶಗಳು ಹಾಗೂ ಚೀನಾ, ಜಪಾನ್, ಕೋರಿಯಾ, ನ್ಯೂಜಿಲ್ಯಾಂಡ್, ಭಾರತ, ಆಸ್ಟ್ರೇಲಿಯಾ ಸೇರಿದಂತೆ ೧೬ ರಾಷ್ಟ್ರಗಳು ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ )ದ ಅಡಿಯಲ್ಲಿ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಇದಾಗಿದೆ. ಆರ್‌ಸಿಇಪಿಗೆ ಈಗಾಗಲೇ ವಿರೋಧ ವ್ಯಕ್ತವಾಗುತ್ತಿದೆ. ಭಾರತ ಹಲವು ಷರತ್ತುಗಳನ್ನು ಇರಿಸಿದ್ದು, ಈ ಬಗ್ಗೆ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ಭಾರತದ ಆರ್‌ಸಿಇಪಿ ಸಂದಿಗ್ಧತೆ: ದಾರಿ ಇದೆಯೇ?

ವಿಪಕ್ಷಗಳು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಲು ಕರೆ ನೀಡಿದ್ದಾರೆ. ದೇಶದ ನಾನಾ ಕಡೆಗಳಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಬದುಕಿಗೆ ಮಾರಕವಾಗುವ ಒಪ್ಪಂದವನ್ನು ಕೇಂದ್ರ ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಆರ್‌ಸಿಇಪಿಯನ್ನು ವಿರೋಧಿಸಿದ್ದಾರೆ. ರೈತರ ಹಿತಾಸಕ್ತಿ ಕಾಯದ ಆರ್‌ಸಿಇಪಿ ಬೇಕಾ..? ಎಲ್ಲಿದೆ ನ್ಯಾಯ ಎಂದು ಪ್ರಶ್ನಿಸಿದ್ದಾರೆ.
”ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (RCEP)ದಡಿಯಲ್ಲಿ ನಡೆಲಿರುವ ಮುಕ್ತ ವ್ಯಾಪಾರ ಒಪ್ಪಂದ (FTA) ದೇಶದ ಕೃಷಿ ಕ್ಷೇತ್ರಕ್ಕೆ ಮಾರಕವಾಗಲಿದೆ, ನರೇಂದ್ರ ಮೋದಿ ಸರ್ಕಾರದ ಈ ಪ್ರಯತ್ನ ರೈತರ ಪಾಲಿನ ಮರಣಶಾಸನ. ಸುಮಾರು 10 ಕೋಟಿ ರೈತರ ಬದುಕು ಹೈನುಗಾರಿಕೆಯನ್ನು ಅವಲಂಬಿಸಿದೆ. ಕರ್ನಾಟಕದಲ್ಲಿಯೇ ಸುಮಾರು 86 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನ್ಯೂಜಿಲ್ಯಾಂಡ್, ಅಸ್ಟ್ರೇಲಿಯಾದಂತಹ ದೇಶಗಳಿಂದ ಅಗ್ಗದ ದರದ ಹಾಲು ಆಮದಿಗೆ ಅವಕಾಶ ನೀಡುವ RCEP ನಮ್ಮ ರೈತರನ್ನು ಬೀದಿ ಪಾಲು ಮಾಡಲಿದೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ಹೈನುಗಾರಿಕೆಯನ್ನು ಉತ್ತೇಜಿಸಲು ‘ಕ್ಷೀರಧಾರೆ’ ಮತ್ತು ಶಾಲಾ ಮಕ್ಕಳನ್ನು ಆರೋಗ್ಯವಂತರನ್ನಾಗಿ ಮಾಡಲು ‘ಕ್ಷೀರಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಮೋದಿಯವರ ಸರ್ಕಾರ ರೈತರು ಮತ್ತು ಶಾಲಾ ಮಕ್ಕಳ ಬದುಕು ಕಸಿಯಲು ಹೊರಟಿದೆ.
ಯುಪಿಎ ಸರ್ಕಾರ RCEP ಮಾತುಕತೆಯಲ್ಲಿ ಭಾಗಿಯಾಗಿದ್ದು ನಿಜ. ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ರೈತರ ಹಿತ ಕಾಪಾಡಲು ಕೆಲವು ಬದಲಾವಣೆಗಳನ್ನು ಬಯಸಿದ್ದರು. ಆದರೆ ಮೋದಿಯವರು ಅವರು ಇಡೀ ದೇಶವನ್ನು ಕತ್ತಲಲ್ಲಿಟ್ಟು ಈ ಒಪ್ಪಂದಕ್ಕೆ ಸಹಿ ಹಾಕಲು ಹೊರಟಿದ್ದಾರೆ. ಎಲ್ಲಿದೆ ಪಾರದರ್ಶಕತೆ? ನಮ್ಮ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿಯವರು FTA ವಿರೋಧಿಸಲು ಕರೆ ನೀಡಿರುವುದನ್ನು ಸ್ವಾಗತಿಸುತ್ತೇನೆ. ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದದ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. #IOpposeRCEP #NoRCEP #RCEPಬೇಡ ಎಂದು ಪೋಸ್ಟ್‌ ಮಾಡಿದ್ದಾರೆ.
ಅಂದ ಹಾಗೇ ಕೇಂದ್ರ ಸರಕಾರ, ಆರ್‌ಸಿಇಪಿ ಒಪ್ಪಂದದ ಮೂಲಕ ದೇಶದ ಕೃಷಿ ವಲಯವನ್ನು ತೆರಿಗೆ ಮುಕ್ತ ವ್ಯಾಪಾರ ವಲಯಕ್ಕೆ ಸೇರಿಸಲು ಮುಂದಾಗಿದೆ. ಇದು ದೇಶದ ಕೃಷಿ ವಲಯಕ್ಕೆ ಕಂಟಕಪ್ರಾಯವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರೈತರ ಪಾಲಿಗೆ ಇದು ಮರಣಶಾಸನವಾಗಲಿದೆ ಎಂದು ಹಲವು ಕಡೆ ಅನ್ನದಾತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಆರ್‌ಸಿಇಪಿ ಒಪ್ಪಂದ ದೇಶಕ್ಕೆ ಮಾರಕವಾಗಲಿದೆ ಎಂಬುದು ಆರ್ಥಿಕ ತಜ್ಞರ ಮಾತು. ಹೀಗಿರುವಾಗ ಆರ್‌ಸಿಇಪಿ ಒಪ್ಪಂದಕ್ಕೆ ಮುಂದಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮಕ್ಕೆ ಖಂಡನೆ, ಆಕ್ರೊಶ ವ್ಯಕ್ತವಾಗುತ್ತಿದೆ.

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here