“ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ” ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸಚಿವ ಕೃಷ್ಣ ಬೈರೇಗೌಡ ವಿರುದ್ದ ಮಾಡಿರುವ ಸ್ಮಶಾನಭೂಮಿ ಒತ್ತುವರಿ ಆರೋಪದ ಬಗ್ಗೆ ಚರ್ಚಿಸಲು ಅವಕಾಶ ನೀಡುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದರು.
ಈ ವೇಳೆ ಸ್ವತಃ ಮಧ್ಯ ಪ್ರವೇಶಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, ಅಧಿವೇಶನದ ಸಂದರ್ಭದಲ್ಲಿ ಸದನದ ಸದಸ್ಯರ ಬಗ್ಗೆ ಯಾವುದೇ ವೈಯಕ್ತಿಕ ವಿಚಾರ ಪ್ರಸ್ತಾಪ ಮಾಡಬೇಕಿದ್ದರೆ ಅದಕ್ಕೊಂದು ನಿಯಮಾವಳಿ ಇದೆ. ಕನಿಷ್ಟ ವಾರಕ್ಕೂ ಮುಂಚೆಯೇ ಸದಸ್ಯರಿಗೆ ನೋಟೀಸ್ ನೀಡಬೇಕು. ಆದರೆ, ಈ ವಿಚಾರದಲ್ಲಿ ದಿಢೀರನೆ ಆರೋಪ ಮಾಡಿ ಚರ್ಚೆಗೆ ಅವಕಾಶ ಕೇಳುತ್ತಿದ್ದಾರೆ. ಆದರೂ ನಾನು ಸದನದ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಮೇಲಿನ ಆರೋಪದ ಬಗ್ಗೆ ಸದನದಲ್ಲಿ ಚರ್ಚಿಸಲು ಹಾಗೂ ಉತ್ತರ ನೀಡಲು ನನ್ನದೇನೂ ಅಭ್ಯಂತರ ಇಲ್ಲ. ಈ ವಿಚಾರ ಸಭಾಧ್ಯಕ್ಷರ ವಿವೇಚನೆಗೆ ಬಿಟ್ಟದ್ದು” ಎಂದರು.
ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಇನ್ನೂ ಸಾಕಷ್ಟು ವಿಧೇಯಕಗಳು ಮಂಡನೆಗೆ ಬಾಕಿ ಇದ್ದು, ತದನಂತರ ಈ ವಿಚಾರವನ್ನು ಚರ್ಚಿಸಲು ಅವಕಾಶ ನೀಡುವುದಾಗಿ ತಿಳಿಸಿದರು.
ಕೃಷ್ಣ ಬೈರೇಗೌಡ ವಿರುದ್ಧ ಬಿಜೆಪಿ ನಾಯಕರಿಂದ ಆರೋಪ
ನಕಲಿ ದಾಖಲೆ ಸೃಷ್ಟಿಸಿ 21 ಎಕರೆ ಕೆರೆ ಹಾಗೂ ಸ್ಮಶಾನದ ಭೂಮಿಯನ್ನು ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿರುದ್ಧ ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.
ನಕಲಿ ದಾಖಲೆ ಸೃಷ್ಟಿಸಿ ಹಾಗೂ ಅಧಿಕಾರ ದುರ್ಬಳಕೆ ಮಾಡಿಕೊಂಡು ಕೃಷ್ಣ ಬೈರೇಗೌಡ ಅವರು ಕೋಲಾರ ಜಿಲ್ಲೆಯ ನರಸಾಪುರ ಹೋಬಳಿ ಗರುಡನಪಾಳ್ಯದಲ್ಲಿ 21 ಎಕರೆ ಜಮೀನು ಕಬಳಿಸಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ಮುಖಂಡ ತಮ್ಮೇಶ ಗೌಡ ಆರೋಪಿಸಿದ್ದಾರೆ.
ಬುಧವಾರ ಬೆಳಗಾವಿಯ ಸುವರ್ಣಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, 1978ರ ದಾಖಲೆಯಲ್ಲಿ ಕೆರೆ ಅಂತ ಇತ್ತು. ಈಗ ಎಲ್ಲಾ ದಾಖಲೆಗಳನ್ನು ತಿದ್ದುಪಡಿ ಮಾಡಲಾಗಿದೆ. ಈ ಜಮೀನಿನ ಮಾರುಕಟ್ಟೆ ಮೌಲ್ಯ ಪ್ರಸ್ತುತ ಐದಾರು ಕೋಟಿ ಇದೆ. ಆರೋಪದ ಹಿನ್ನೆಲೆ ಸಚಿವ ಸ್ಥಾನಕ್ಕೆ ಕೃಷ್ಣ ಬೈರೇಗೌಡ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರು.


