ಕೇಂದ್ರ ಸರ್ಕಾರ ಅಂಗೀಕರಿಸಿರುವ ರೈತ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯಬೇಕು. ರಾಜ್ಯ ಸರ್ಕಾರ ಎಪಿಎಂಸಿ, ಭೂಸುಧಾರಣೆ ಮತ್ತು ವಿದ್ಯುತ್ ತಿದ್ದುಪಡಿ ಮಸೂದೆಗಳನ್ನು ಮಂಡಿಸಿ ಅಂಗೀಕರಿಸಬಾರದು ಎಂದು ಒತ್ತಾಯಿಸಿ ಸೆಪ್ಟೆಂಬರ್ 28 ರಂದು ’ಭಾರತ್ ಬಂದ್’ ಆಚರಿಸಲಾಗುವುದು ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ, ದಲಿತ, ಪ್ರಗತಿಪರ ಸಂಘಟನೆಗಳ ಮುಖಂಡರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ಮತ್ತು ಜನವಿರೋಧಿ ಮಾರಕ ಕಾಯ್ದೆಗಳನ್ನು ಜಾರಿಗೊಳಿಸಲು ಹೊರಟಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಧೋರಣೆಯನ್ನು ಬದಲಿಸಿಕೊಳ್ಳಬೇಕು. ಮಸೂದೆಗಳನ್ನು ವಾಪಸ್ ಪಡೆಯಬೇಕು ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಭಾರತ್ ಬಂದ್ ನಡೆಯಲಿದೆ ಎಂದರು.
ಇದನ್ನೂ ಓದಿ: ರೈತರು, ಕಾರ್ಮಿಕರು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ: ವಿರೋಧ ಪಕ್ಷಗಳಿಂದ ಮೌನ ಪ್ರತಿಭಟನೆ
ಸಮನ್ವಯ ಸಮಿತಿ ಮುಖಂಡ ಎ.ಗೋವಿಂದರಾಜ್ ಮಾತನಾಡಿ, ರೈತರ ತೀವ್ರ ವಿರೋಧದ ನಡುವೆಯೂ ಮೂರು ಮಸೂದೆಗಳನ್ನು ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಮಂಡಿಸಿ ಅಂಗೀಕರಿಸಿದೆ. ಸರ್ಕಾರ ಸರ್ವಾಧಿಕಾರಿ ಧೋರಣೆಯ ಮೂಲಕ ರೈತರನ್ನು ಬಗ್ಗುಬಡಿಯಲು ಯತ್ನಿಸುತ್ತಿದೆ. ಇದಕ್ಕೆ ಸೊಪ್ಪು ಹಾಕುವುದಿಲ್ಲ ಎಂದು ಹೇಳಿದರು.
ರೈತ ಸಂಘ ಮತ್ತು ಹಸಿರು ಸೇನೆ ಮುಖಂಡ ಆನಂದ ಪಟೇಲ್ ಮಾತನಾಡಿ ಸರ್ಕಾರ ಭೂಸುಧಾರಣ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸುಳ್ಳು ಹೇಳುತ್ತಿದೆ. ರೈತರು, ಜನಸಾಮಾನ್ಯರನ್ನು ದಿಕ್ಕುತಪ್ಪಿಸುತ್ತಿದೆ. ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ರಿಲಯನ್ಸ್, ಮೆಟ್ರೋ, ಮೋರ್‌ನಂತಹ ಕಂಪನಿಗಳಿಗೆ ಅನುಕೂಲವಾಗುತ್ತದೆ. ಈ ವಿಷಯವನ್ನು ಸರ್ಕಾರ ಮರೆಮಾಚುತ್ತಿದೆ ಎಂದು ಆರೋಪಿಸಿದರು.
ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಹಳ್ಳಗಳಲ್ಲಿ ಮಾಲ್‌ಗಳು ಆರಂಭವಾಗಲಿದೆ. ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕಿಂತ ಕಡಿಮೆ ಬೆಲೆಗೆ ಮಾಲ್‌ಗಳಲ್ಲಿ ದೊರೆಯಲಿವೆ. ಇದರಿಂದ ರೈತರು ಮಾಲ್‌ಗಳೊಂದಿಗೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ನಷ್ಟಕ್ಕೆ ಗುರಿಯಾಗುತ್ತಾರೆ. ಆತ್ಮಹತ್ಯೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಇದನ್ನೂ ಓದಿ: ಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು, ರೈತರ ಗುರುತನ್ನೇ ಅಳಿಸಿಹಾಕಲಿವೆ: ಜಸ್ಟೀಸ್ ನಾಗಮೋಹನ್ ದಾಸ್
ಸರ್ಕಾರದ ತೀರ್ಮಾನದಿಂದ ದಳ್ಳಾಳಿಗಳು ಮತ್ತು ಮಧ್ಯವರ್ತಿಗಳ ಹಾವಳಿ ತಪ್ಪಲಿದೆ. ರೈತರಿಗೆ ಲಾಭ ದೊರೆಯಲಿದೆ ಎಂದು ಸಚಿವರು ಸುಳ್ಳು ಹೇಳುತ್ತಾರೆ. ರೈತರು ತಮ್ಮ ಉತ್ಪನ್ನಗಳನ್ನು ಎಪಿಎಂಸಿ ಮಾರುಕಟ್ಟೆಗೆ ತಂದರೆ ಕನಿಷ್ಠ ಬೆಂಬಲ ಬೆಲೆ ಗೊತ್ತಾಗುತ್ತದೆ. ಹತ್ತು ಮಂದಿ ದಲ್ಲಾಳಿಗಳು ಸ್ಪರ್ಧೆಗೆ ಇಳಿದು ರೈತರ ಉತ್ಪನ್ನಗಳನ್ನು ಹೆಚ್ಚು ಬೆಲೆಗೆ ಕೊಳ್ಳುತ್ತಾರೆ. ಇದು ಸರ್ಕಾರಕ್ಕೆ ತಿಳಿಯಬೇಕಾಗಿದೆ ಎಂದರು.
ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಸಾಕಷ್ಟು ತೊಂದರೆಯಾಗಲಿದೆ. ಸರ್ಕಾರಕ್ಕೆ ಬರಬೇಕಾದ ಕೋಟ್ಯಂತರ ರೂಪಾಯಿ ಸೆಸ್ ಇಲ್ಲವಾಗಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಅಪಾರ ನಷ್ಟ ಉಂಟಾಗಲಿದೆ. ಸರ್ಕಾರಗಳು ಎಲ್ಲವನ್ನೂ ಖಾಸಗೀಕರಣಗೊಳಿಸಿ ಕಾರ್ಪೋರೇಟರ್ ಸಂಸ್ಥೆಗಳ ನಿಯಂತ್ರಣಕ್ಕೆ ಕೊಟ್ಟು ರೈತರು, ಜನಸಾಮಾನ್ಯರು ನರಳುವಂತಹ ವ್ಯವಸ್ಥೆಯನ್ನು ಸೃಷ್ಟಿಸಲು ಹೊರಟಿವೆ ಎಂದು ವಾಗ್ದಾಳಿ ನಡೆಸಿದರು.
ಪತ್ರಿಕಾಗೋಷ್ಠಿಯಲ್ಲಿ ಜನಪರ ಚಿಂತಕ ಕೆ.ದೊರೈರಾಜ್, ಸಮನ್ವಯ ಸಮಿತಿಯ ಕಾರ್ಯದರ್ಶಿ ಬಿ.ಉಮೇಶ್, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಸಿ.ಅಜ್ಜಪ್ಪ, ಸ್ಲಂ ಜನಾಂದೋಲನ ಸಂಚಾಲಕ ಎ.ನರಸಿಂಹಮೂರ್ತಿ, ಆರ್.ಕೆ.ಎಸ್ ಸಂಘಟನೆಯ ಎನ್.ಎಸ್. ಸ್ವಾಮಿ, ಎಐಕೆಎಸ್ ಶಶಿಕಾಂತ್ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ: ರಸ್ತೆಯಲ್ಲಿ ಅರೆಬೆತ್ತಲೆ ಕುಳಿತ ರೈತರು; ಸರ್ಕಾರದ ವಿರುದ್ಧ ತೀವ್ರಗೊಂಡ ಪ್ರತಿಭಟನೆ


