Homeಕರ್ನಾಟಕಕೋರ್ಟ್ ಆದೇಶಕ್ಕೆ ಗೌರವ, ಸತ್ಯಕ್ಕೆ ಬದ್ಧ: ಧರ್ಮಸ್ಥಳ ಪ್ರಕರಣದಲ್ಲಿ ಡಿಜಿಟಲ್ ಮಾಧ್ಯಮಗಳ ದಿಟ್ಟ ನಿರ್ಧಾರ

ಕೋರ್ಟ್ ಆದೇಶಕ್ಕೆ ಗೌರವ, ಸತ್ಯಕ್ಕೆ ಬದ್ಧ: ಧರ್ಮಸ್ಥಳ ಪ್ರಕರಣದಲ್ಲಿ ಡಿಜಿಟಲ್ ಮಾಧ್ಯಮಗಳ ದಿಟ್ಟ ನಿರ್ಧಾರ

- Advertisement -
- Advertisement -

ಬೆಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಹಾಗೂ ಧರ್ಮಸ್ಥಳದ ಸುತ್ತಮುತ್ತ ನಡೆದಿದೆ ಎನ್ನಲಾದ ಸರಣಿ ಕೊಲೆಗಳ ವರದಿ ಮಾಡುವ ವಿಚಾರದಲ್ಲಿ ನ್ಯಾಯಾಲಯಗಳ ಆದೇಶವನ್ನು ಪಾಲಿಸುವುದರ ಜೊತೆಗೆ, ಸತ್ಯ ಸುದ್ದಿಯ ಪ್ರಸಾರವನ್ನು ಮುಂದುವರಿಸಲು ಡಿಜಿಟಲ್ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳು ಒಮ್ಮತದ ನಿರ್ಣಯ ತೆಗೆದುಕೊಂಡಿವೆ. ನ್ಯಾಯಾಂಗದ ಪ್ರಕ್ರಿಯೆಯನ್ನು ಗೌರವಿಸುತ್ತಲೇ, ಪತ್ರಿಕಾ ಸ್ವಾತಂತ್ರ್ಯ ಮತ್ತು ಸಾರ್ವಜನಿಕ ಹಿತಾಸಕ್ತಿಯ ರಕ್ಷಣೆಗೆ ಬದ್ಧವಾಗಿರುವುದಾಗಿ ಅವರು ಘೋಷಿಸಿದ್ದಾರೆ.

ಧರ್ಮಸ್ಥಳದ ದೇವಾಲಯ ಹಾಗೂ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಹರ್ಷೇಂದ್ರ ಕುಮಾರ್, ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಮತ್ತು ಮಾಧ್ಯಮಗಳಲ್ಲಿ ಸುಳ್ಳು ಹಾಗೂ ಮಾನಹಾನಿಕರ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ಆಕ್ಷೇಪಿಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ದಾವೆಯಲ್ಲಿ, 4,140 ಯೂಟ್ಯೂಬ್ ವಿಡಿಯೋಗಳು, 932 ಫೇಸ್‌ಬುಕ್ ಪೋಸ್ಟ್‌ಗಳು, 3,584 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳು, 108 ಸುದ್ದಿ ಲೇಖನಗಳು, 37 ರೆಡ್ಡಿಟ್ ಪೋಸ್ಟ್‌ಗಳು ಮತ್ತು 41 ಟ್ವೀಟ್‌ಗಳು ಸೇರಿದಂತೆ ಒಟ್ಟು 8,842 ಲಿಂಕ್‌ಗಳನ್ನು ನಿರ್ಬಂಧಿಸುವಂತೆ ಅವರು ಕೋರಿದ್ದರು. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ತಮ್ಮ ವಿರುದ್ಧ ನೇರ ಆರೋಪಗಳು ಇಲ್ಲದಿದ್ದರೂ, ತಮ್ಮ ಕುಟುಂಬ, ದೇವಾಲಯ ಮತ್ತು ಸಂಸ್ಥೆಗಳ ವಿರುದ್ಧ ವ್ಯವಸ್ಥಿತವಾಗಿ ಅಪಪ್ರಚಾರ ಮಾಡಲಾಗುತ್ತಿದೆ ಎಂಬುದು ಅವರ ಮುಖ್ಯ ವಾದವಾಗಿತ್ತು.

ಈ ವಾದವನ್ನು ಆಲಿಸಿದ್ದ ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ವಿಜಯ ಕುಮಾರ್ ರೈ ಅವರು, ಜುಲೈ 18ರಂದು ಏಕಪಕ್ಷೀಯ ಪ್ರತಿಬಂಧಕ ಆದೇಶವನ್ನು ಹೊರಡಿಸಿದ್ದರು. ಈ ಆದೇಶದ ಅನ್ವಯ, ಮುಂದಿನ ವಿಚಾರಣೆಯವರೆಗೆ ಡಿಜಿಟಲ್, ಸಾಮಾಜಿಕ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಯಾವುದೇ ಮಾನಹಾನಿಕರ ವಿಷಯವನ್ನು ಪ್ರಕಟಿಸದಂತೆ ಅಥವಾ ಹಂಚದಂತೆ ಪ್ರತಿವಾದಿಗಳು ಮತ್ತು ಅಪರಿಚಿತ ವ್ಯಕ್ತಿಗಳಿಗೆ ನಿರ್ಬಂಧ ವಿಧಿಸಲಾಗಿತ್ತು.

ಈ ಆದೇಶದ ಹಿನ್ನೆಲೆಯಲ್ಲಿ, ಬೆಂಗಳೂರಿನ ಈದಿನ ಡಾಟ್ ಕಾಮ್ ಕಚೇರಿಯಲ್ಲಿ ಶುಕ್ರವಾರ ಪ್ರಮುಖ ಯೂಟ್ಯೂಬರ್‌ಗಳು ಮತ್ತು ಡಿಜಿಟಲ್ ಮಾಧ್ಯಮಗಳ ಪ್ರತಿನಿಧಿಗಳ ಮಹತ್ವದ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ, ನ್ಯಾಯಾಲಯದ ಆದೇಶವನ್ನು ಪಾಲಿಸುವ, ಸತ್ಯ ಸುದ್ದಿಯ ಪ್ರಸಾರವನ್ನು ಮುಂದುವರಿಸುವ ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟವನ್ನು ಒಗ್ಗಟ್ಟಿನಿಂದ ಮುಂದುವರಿಸುವ ಬಗ್ಗೆ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಯಿತು.

ಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಣಯಗಳ ಜೊತೆಗೆ, “ಸದರಿ ಆದೇಶಗಳನ್ನು ನ್ಯಾಯಾಲಯದಲ್ಲೇ ಪ್ರಶ್ನಿಸುವ ನಮ್ಮ ಹಕ್ಕನ್ನು ಉಳಿಸಿಕೊಳ್ಳುತ್ತಾ, ಈ ಸದ್ಯಕ್ಕೆ ಕೆಳಹಂತದ ಮತ್ತು ರಾಜ್ಯ ಉಚ್ಚ ನ್ಯಾಯಾಲಯದ ಆದೇಶಗಳನ್ನು ನಾವು ಪಾಲಿಸಲು ಬದ್ಧರಿದ್ದೇವೆ” ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದರು. “ಆದರೆ, ಆದೇಶದಲ್ಲೇ ಸೂಚಿಸಿರುವ ಹಾಗೆ ಮತ್ತು ನಮ್ಮ ಪತ್ರಿಕಾಧರ್ಮಕ್ಕೆ ಬದ್ಧರಾಗಿದ್ದುಕೊಂಡು ಯಾರದ್ದೇ ಮೇಲೆ ಆಧಾರರಹಿತವಾದ, ಮಾನನಷ್ಟಕ್ಕೆ ಕಾರಣವಾಗುವ ಸುದ್ದಿ ಅಥವಾ ವಿಶ್ಲೇಷಣೆಗಳನ್ನು ನಾವು ಪ್ರಕಟಿಸುವುದಿಲ್ಲ. ಅದೇ ಸಂದರ್ಭದಲ್ಲಿ ನಡೆಯುವ ಘಟನಾವಳಿಗಳಿಗೆ ಸಂಬಂಧಿಸಿದಂತೆ ಯಥಾವತ್ ಸುದ್ದಿಗಳನ್ನು ಪ್ರಕಟಿಸುವ ನಮ್ಮ ಹಕ್ಕನ್ನು ನ್ಯಾಯಾಲಯವು ನಿರ್ಬಂಧಿಸಿಲ್ಲ ಎನ್ನುವುದನ್ನು ನಾವು ಅರಿತಿದ್ದೇವೆ. ಹೀಗಾಗಿ, ಸುದ್ದಿಗಳನ್ನು ಪ್ರಕಟಿಸುವ ಮತ್ತು ಈ ಹೊತ್ತು ಎತ್ತಬೇಕಾದ ಪ್ರಶ್ನೆಗಳನ್ನು ಎತ್ತುವ ನಮ್ಮ ಹಕ್ಕನ್ನು ಚಲಾಯಿಸುತ್ತೇವೆ ಮತ್ತು ಆ ಮೂಲಕ ನಮ್ಮ ಕರ್ತವ್ಯವನ್ನು ಪಾಲಿಸಲು ನಾವು ಬದ್ಧರಾಗಿದ್ದೇವೆ” ಎಂಬ ನಿರ್ಣಯವನ್ನು ಡಿಜಿಟಲ್ ಮಾಧ್ಯಮಗಳಲ್ಲಿ ಸಕ್ರಿಯರಾಗಿರುವವರು ತೆಗೆದುಕೊಂಡರು.

ಸಭೆಯಲ್ಲಿ ದ ನ್ಯೂಸ್ ಮಿನಿಟ್‌ನ ಧನ್ಯಾ ರಾಜೇಂದ್ರನ್, ಪೂಜಾ ಪ್ರಸನ್ನ, ಈ ದಿನ ಟಿವಿಯ ಡಾ. ಬಸವರಾಜು ಬಿ.ಸಿ, ಈದಿನ.ಕಾಮ್‌ ಸಂಪಾದಕರಾದ ಬಸವರಾಜು ಮೇಗಲಕೇರಿ, ವಾರ್ತಾಭಾರತಿಯ ಆಝಾದ್ ಕಂಡಿಗ, ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹಾಗೂ ಪರಶುರಾಮ್, ಪ್ರತಿಧ್ವನಿಯ ಶಿವಕುಮಾರ್, ನ್ಯಾಷನಲ್ ಟಿವಿಯ ಮಂಜು ಬಣಗೆರೆ, ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಚಿಕ್ಕನೇರಳೆ, ಯೂಟ್ಯೂಬರ್‌ಗಳಾದ ಕಲಾ ಮಾಧ್ಯಮ ಪರಮೇಶ್ವರ್, ರಾ ಚಿಂತನ್, ಕುಡ್ಲ ರ‍್ಯಾಂಪೇಜ್‌ ಅಜಯ್‌ ಅಂಚನ್, ಪತ್ರಕರ್ತರಾದ ಕನ್ನಡ ಪ್ಲಾನೆಟ್ ದಿನೇಶ್ ಕುಮಾರ್ ದಿನೂ, V4 ನ್ಯೂಸ್‌ನ ಲಕ್ಷ್ಮಣ್ ಕುಂದರ್, ಪೀಪಲ್ ಮೀಡಿಯಾದ ಸುರಭಿ ರೇಣುಕಾಂಬಿಕೆ, ಪ್ರಸ್ತುತ ನ್ಯೂಸ್‌ನ ಬಶೀರ್ ಅಡ್ಯನಡ್ಕ, ಸನ್ಮಾರ್ಗ ನ್ಯೂಸ್‌ನ ಆರ್ ಎ ಲೋಹಾನಿ, ಆಶಾ ಮುಸ್ಸಂಜೆ ಸಮಯ, ಪೊಲೀಸ್ ವಾಣಿ ರಾಘವೇಂದ್ರಚಾರಿ, ದ ಪಾಲಿಟಿಕ್‌ನ ಸಿದ್ದಪ್ಪ ಮೂಲಗೆ, ಜನಶಕ್ತಿ ಮೀಡಿಯಾದ ಗುರುರಾಜ್ ದೇಸಾಯಿ, ತ್ರಿವರ್ಣ ನ್ಯೂಸ್ ಉಮರ್ ಫಾರೂಕ್, ಜಗದೀಶ್ ಕನ್ನಡ ಜಾಣ ಜಾಣೆಯರು, ಕನ್ನಡ ವನ್‌ನ ಭಾಗ್ಯನಾರಾಯಣ ಬೊಗ್ಗವರಪು, ಗೌರಿ ಮೀಡಿಯಾದ ಚಂದ್ರು ತರಹುಣಸೆ, ದೊಡ್ಡಿಪಾಳ್ಯ ನರಸಿಂಹ ಮೂರ್ತಿ, ಡಾ. ವಾಸು ಎಚ್‌ ವಿ, ಹೇಮಾ ವೆಂಕಟ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಕರಣದ ಹಿನ್ನೆಲೆ

2012ರಲ್ಲಿ ನಡೆದ ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ರಾಜ್ಯಾದ್ಯಂತ ದೊಡ್ಡ ಮಟ್ಟದ ಆಕ್ರೋಶ ಮತ್ತು ಸಾರ್ವಜನಿಕ ಚರ್ಚೆಗೆ ಕಾರಣವಾಗಿತ್ತು. ಈ ಪ್ರಕರಣದ ತನಿಖೆಯಲ್ಲಿನ ಲೋಪಗಳ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು.

ಇತ್ತೀಚೆಗೆ, ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಕೆಲವು ಡಿಜಿಟಲ್ ವೇದಿಕೆಗಳಲ್ಲಿ “ಧರ್ಮಸ್ಥಳದಲ್ಲಿ ಸರಣಿ ಕೊಲೆಗಳು ಮತ್ತು ಅತ್ಯಾಚಾರ ಕೃತ್ಯಗಳು ನಡೆದಿವೆ, ಮತ್ತು ನೂರಾರು ಮೃತದೇಹಗಳನ್ನು ಅಲ್ಲಿ ಹೂತು ಹಾಕಲಾಗಿದೆ” ಎಂಬ ಗಂಭೀರ ಆರೋಪಗಳು ಪುನಃ ಮುಂಚೂಣಿಗೆ ಬಂದವು. ಈ ಆರೋಪಗಳು ಧರ್ಮಸ್ಥಳದ ಆಡಳಿತ ಮತ್ತು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಕುಟುಂಬದ ಸದಸ್ಯರ ವಿರುದ್ಧವೂ ಬೆರಳು ಮಾಡಿ ತೋರುತ್ತಿದ್ದವು. ಈ ಆರೋಪಗಳ ಪ್ರಸಾರದಿಂದ ತಮ್ಮ ಕುಟುಂಬ, ದೇವಾಲಯ ಮತ್ತು ಸಂಸ್ಥೆಗಳಿಗೆ ಮಾನಹಾನಿಯಾಗುತ್ತಿದೆ ಎಂದು ಭಾವಿಸಿದ ಧರ್ಮಾಧಿಕಾರಿಗಳ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರು ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ದಾವೆಯಲ್ಲಿ, ಆನ್‌ಲೈನ್‌ನಲ್ಲಿ ಹರಡಿರುವ ಸಾವಿರಾರು ಲಿಂಕ್‌ಗಳನ್ನು ನಿರ್ಬಂಧಿಸುವಂತೆ ಮತ್ತು ಮಾಧ್ಯಮಗಳು ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವಿಷಯವನ್ನು ಪ್ರಸಾರ ಮಾಡದಂತೆ ತಡೆಯುವಂತೆ ಅವರು ಕೋರಿದ್ದರು.

ನ್ಯಾಯಾಲಯವು ಹರ್ಷೇಂದ್ರ ಕುಮಾರ್ ಅವರ ಮನವಿಯನ್ನು ಪುರಸ್ಕರಿಸಿ, ಜುಲೈ 18ರಂದು ಏಕಪಕ್ಷೀಯ ಪ್ರತಿಬಂಧಕ ಆದೇಶವನ್ನು ಹೊರಡಿಸಿತು. ಈ ಆದೇಶವು ಡಿಜಿಟಲ್, ಸಾಮಾಜಿಕ ಮತ್ತು ಮುದ್ರಣ ಮಾಧ್ಯಮಗಳ ಮೇಲೆ ವ್ಯಾಪಕ ನಿರ್ಬಂಧಗಳನ್ನು ಹೇರಿತು. ಈ ಆದೇಶವು ಮಾಧ್ಯಮ ಸ್ವಾತಂತ್ರ್ಯದ ಮೇಲಿನ ಪರಿಣಾಮಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿತ್ತು ಮತ್ತು ಕರ್ನಾಟಕ ಹೈಕೋರ್ಟ್ ಕೂಡ ಈ ಆದೇಶದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿತ್ತು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಈ ಗಂಭೀರ ಆರೋಪಗಳ ಸತ್ಯಾಸತ್ಯತೆಯನ್ನು ಹೊರತರಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಡಿಜಿಟಲ್ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳು ಒಟ್ಟಾಗಿ ಈ ನಿರ್ಣಯವನ್ನು ಕೈಗೊಂಡಿದ್ದಾರೆ.

ಧರ್ಮಸ್ಥಳ ಪ್ರಕರಣ: ಸರಣಿ ಅಪರಾಧಗಳ ತನಿಖೆಗೆ ಎಸ್‌ಐಟಿ ಅಖಾಡಕ್ಕೆ; ದೂರುದಾರರ ವಿಚಾರಣೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...