ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಇಂದಿನಿಂದ (ಮೇ.5) ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ಶುರುವಾಗಲಿದೆ. ಮೂರೂ ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025’ ಕುರಿತಂತೆ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, “ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ” ಎಂದರು.
“ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಆಯೋಗ ವರದಿ ನೀಡಿದೆ.”
“ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡುವ ಸಲುವಾಗಿ ದತ್ತಾಂಶ ಸಂಗ್ರಹಿಸಲು ಹೊಸ ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ”
“2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 1-8-2024ರಲ್ಲಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರೆದೆ” ಎಂದು ಸಿಎಂ ವಿವರಿಸಿದರು.
ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ ಸಮುದಾಯಗಳಲ್ಲಿ ಯಾರು ಎಷ್ಟು ಮಂದಿ ಇದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಬೇಕಿದೆ. ಎಡಗೈ ಸಮುದಾಯ, ಬಲಗೈ ಸಮುದಾಯ ಎಷ್ಟಿದೆ ಎನ್ನುವುದು ವೈಜ್ಞಾನಿಕವಾಗಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ ಎಂದು ಹೇಳಿದರು.
“ಮೊದಲ ಹಂತದಲ್ಲಿ, ಇವತ್ತಿನಿಂದ (5 ಮೇ 2025 ರಿಂದ 17 ಮೇ 2025) ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗುತ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರುತ್ತಾರೆ.”
“ಎರಡನೇ ಹಂತದಲ್ಲಿ, (19 ಮೇ 2025 ರಿಂದ 21 ಮೇ 2025) ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಇಲ್ಲಿ ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು.”
“ಮೂರನೇ ಹಂತದಲ್ಲಿ, (19 ಮೇ 2025 ರಿಂದ 22 ಮೇ 2025) ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು. ನಿಖರ ದತ್ತಾಂಶ ಸಂಗ್ರಹಿಸಿದ ಮೇಲೆ ನಮಗೆ ಶಿಫಾರಸ್ಸು ಮಾಡುತ್ತಾರೆ. ಒಟ್ಟು 60 ದಿನ ಸಮಯಾವಕಾಶ ನೀಡಲಾಗಿದೆ.
ಎಂದು ಸಿಎಂ ಮಾಹಿತಿ ನೀಡಿದರು.
ಮೊಬೈಲ್ ಆ್ಯಪ್
ಮೊಬೈಲ್ ಆ್ಯಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರವರೆಗೆ ಮೊಬೈಲ್ ಆ್ಯಪ್ ಎನಾಬಲ್ ಮಾಡಲಾಗಿರುತ್ತದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು ಎಂದು ಸಿಎಂ ಹೇಳಿದರು.
ಸಹಾಯವಾಣಿ ಸಂಖ್ಯೆ

ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು. ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ. ಎಲ್ಲಾ ಸಂಘಟನೆಗಳೂ ಇದಕ್ಕೆ ಸಹಕರಿಸಿ ಎಂದೂ ಸಿಎಂ ಮನವಿ ಮಾಡಿದರು.
ಸಚಿವರಾದ ಹೆಚ್.ಸಿ ಮಹದೇವಪ್ಪ, ಕೆ.ಹೆಚ್ ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕರಾದ ರೂಪಕಲಾ ಶಶಿಧರ್, ವಿಧಾನಪರಿಷತ್ ಸದಸ್ಯ ಸುದಾಮ ದಾಸ್, ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ


