ದೆಹಲಿಯ ಪ್ರತಿಷ್ಠಿತ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್‌ನ ಹಲವಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ, ಸ್ವಯಂ ಘೋಷಿತ ದೇವಮಾನವ, ಪಾರ್ಥ್ ಸಾರಥಿ ಎಂದೂ ಕರೆಯಲ್ಪಡುವ ಸ್ವಾಮಿ ಚೈತನ್ಯಾನಂದ ಸರಸ್ವತಿ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ವರದಿಯಾಗಿದೆ.
ಆಗಸ್ಟ್ 4ರಂದು ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಔಪಚಾರಿಕ ದೂರಿನ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯನೆಂದು ಹೇಳಲಾಗುವ ಪಾರ್ಥ್ ಸಾರಥಿ ಪ್ರಕರಣ ಬೆಳಕಿಗೆ ಬಂದಾಗಿನಿಂದ ತಲೆಮರೆಸಿಕೊಂಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ತನಿಖೆಯ ಸಮಯದಲ್ಲಿ, ಪೊಲೀಸರು ಇಡಬ್ಲ್ಯುಎಸ್ (ಆರ್ಥಿಕವಾಗಿ ದುರ್ಬಲ ವಿಭಾಗ) ವಿದ್ಯಾರ್ಥಿವೇತನದಡಿಯಲ್ಲಿ ದಾಖಲಾದ 32 ಪಿಜಿಡಿಎಂ ವಿದ್ಯಾರ್ಥಿಗಳಿಂದ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಈ ಪೈಕಿ 17 ವಿದ್ಯಾರ್ಥಿಗಳು ಪಾರ್ಥ್ ಸಾರಥಿ ವಿರುದ್ಧ ನಿಂದನೀಯ ಭಾಷೆ ಬಳಸುವುದು, ಅಶ್ಲೀಲ ಸಂದೇಶಗಳನ್ನು ಕಳುಹಿಸುವುದು ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಕೆಲ ಅಧ್ಯಾಪಕರು ಮತ್ತು ಸಂಸ್ಥೆಯ ಆಡಳಿತಾಧಿಕಾರಿಗಳು ಪಾರ್ಥ್ ಸಾರಥಿಯ ಬೇಡಿಕೆಗಳನ್ನು ಈಡೇರಿಸುವಂತೆ ವಿದ್ಯಾರ್ಥಿನಿಯರ ಮೇಲೆ ಒತ್ತಡ ಹೇರಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ.
ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)ನ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, 16 ಸಂತ್ರಸ್ತರು ಮ್ಯಾಜಿಸ್ಟ್ರೇಟ್ ಮುಂದೆ ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದಾರೆ.
ದೆಹಲಿ ಪೊಲೀಸರು ಸಂಸ್ಥೆಯ ನೆಲಮಾಳಿಗೆಯಲ್ಲಿ ನಕಲಿ ರಾಜತಾಂತ್ರಿಕ ನಂಬರ್ ಪ್ಲೇಟ್ ಹೊಂದಿರುವ ವೋಲ್ವೋ ಕಾರನ್ನು ಪತ್ತೆಹಚ್ಚಿದ್ದಾರೆ. ಪಾರ್ಥ್ ಸಾರಥಿ ಬಳಸಿದ್ದಾರೆ ಎನ್ನಲಾದ ಈ ವಾಹನದ ಮೇಲೆ ಆಗಸ್ಟ್ 25 ರಂದು ಎರಡನೇ ಎಫ್‌ಐಆರ್ ದಾಖಲಾಗಿದ್ದು, ಅಂದಿನಿಂದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸ್ ದಾಳಿಗಳು ಮತ್ತು ನಿರಂತರ ಕಣ್ಗಾವಲು ಹೊರತಾಗಿಯೂ, ಆರೋಪಿ ತಲೆಮರೆಸಿಕೊಂಡಿದ್ದಾರೆ. ಅಧಿಕಾರಿಗಳು ಆತನ ಬಂಧನ ಪ್ರಯತ್ನಗಳನ್ನು ತೀವ್ರಗೊಳಿಸಿದ್ದಾರೆ ಎಂದು ವರದಿ ವಿವರಿಸಿದೆ.
ಸಮಾಜವಾದಿ ಪಕ್ಷದ ಮಾಜಿ ಸಚಿವ ಅಜಮ್ ಖಾನ್ 23 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆ


