Homeಕರ್ನಾಟಕಹಿರಿಯ ಸಾಹಿತಿ ಚಂಪಾ ನಿಧನ

ಹಿರಿಯ ಸಾಹಿತಿ ಚಂಪಾ ನಿಧನ

- Advertisement -
- Advertisement -

ಕನ್ನಡದ ಹಿರಿಯ ಕವಿ, ನಾಟಕಕಾರ, ಪತ್ರಿಕಾ ಸಂಪಾದಕ, ಕಸಾಪ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ (ಚಂಪಾ) ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕೋಣನಕುಂಟೆಯ ಆಸ್ಟ್ರಾ ಆಸ್ಪತ್ರೆಯಲ್ಲಿ ನಿಧನರಾದರು. ಸುಮಾರು 15 ವರ್ಷಗಳ ಹಿಂದೆ ಚಂ‍ಪಾ ಅವರು ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಅವರಿಗೆ ಪತ್ನಿ, ಒಬ್ಬ ಪುತ್ರ, ಒಬ್ಬರು ಪುತ್ರಿ ಇದ್ದಾರೆ. ಪಾರ್ಥಿವ ಶರೀರವನ್ನು ನಗರದ ಯಲಚೇನಹಳ್ಳಿಯಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು. ಅಂತ್ಯಕ್ರಿಯೆಯನ್ನು ಬೆಂಗಳೂರಿನಲ್ಲಿ ಅಥವಾ ಹಾವೇರಿ ಸಮೀಪದ ಡೊಂಬರಮತ್ತೂರಿನಲ್ಲಿ ನಡೆಸುವುದೋ ಎಂಬ ಬಗ್ಗೆ ಚರ್ಚೆ ನಡೆದಿದೆ. ಕೋವಿಡ್‌ ಪ್ರಕರಣಗಳ ಕಾರಣ ಅಂತ್ಯಕ್ರಿಯೆ ಸ್ಥಳದ ಬಗ್ಗೆ ಇನ್ನೂ ನಿರ್ಧಾರ ಅಂತಿಮವಾಗಿಲ್ಲ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್‌ 18ರಂದು ಚಂಪಾ ಜನಿಸಿದರು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ. ಚಂದ್ರಶೇಖರ ಪಾಟೀಲರು ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತಾದರು.

ಬ್ರಿಟಿಷ್‌ ಕೌನ್ಸಿಲ್‌ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡಿನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್‌ ಸಂಸ್ಥೆಯಿಂದ ಇಂಗ್ಲಿಷ್‌ ಅಧ್ಯಯನದ ಡಿಪ್ಲೊಮ ಪಡೆದರು. ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಬೋಧನಾ ವೃತ್ತಿ ಆರಂಭಿಸಿದರು.

ಕೊಡೆಗಳು, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಗೋಕರ್ಣದ ಗೌಡಸಾನಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ, ಬೇಂದ್ರೆ-ನಾ ಕಂಡಂತೆ, ನನಗೆ ಕಂಡಷ್ಟು, ೨೬ ದಿನ ೨೫ ರಾತ್ರಿ, ಕನ್ನಡ ಕನ್ನಡ ಬರ್ರಿ‍ ನಮ್ಮ ಸಂಗಡ ಮೊದಲಾದ ಕೃತಿಗಳನ್ನು ರಚಿಸಿದ್ದಾರೆ. ‘ಸಂಕ್ರಮಣ’ ಪತ್ರಿಕೆಯ ಮೂಲಕ ಸಾಹಿತ್ಯ ಚರ್ಚೆಗೆ ಹೊಸ ದಿಕ್ಕು ತೋರಿದವರು ಚಂಪಾ. ದಲಿತ,ಬಂಡಾಯ ಸಾಹಿತ್ಯದ ಯುವ ಬರಹಗಾರರಿಗೆ ಸಂಕ್ರಮಣ ವೇದಿಕೆಯಾಗಿತ್ತು.

ನಾಡು ನುಡಿಯ ವಿಚಾರದಲ್ಲಿ ಚಂಪಾ ದಿಟ್ಟ ದನಿ. ಕನ್ನಡ ಸಾಹಿತ್ಯ ಪರಿಷತ್‌, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅವರು ಸಲ್ಲಿಸಿದ ಸೇವೆ ಅವಿಸ್ಮರಣೀಯ. 2017ರಲ್ಲಿ ಮೈಸೂರಿನಲ್ಲಿ ನಡೆದ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಅವರ ಸಾಹಿತ್ಯ ಸೇವೆಗಾಗಿ ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ (1960, 74, 76), ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ದಿನಕರ ದೇಸಾಯಿ ಪ್ರತಿಷ್ಠಾನ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೆ.ವಿ. ಶಂಕರಗೌಡ ರಂಗಭೂಮಿ ಪ್ರಶಸ್ತಿ, ಸಂದೇಶ್‌ ಮಾಧ್ಯಮ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳು ಅವರಿಗೆ ಸಂದಿವೆ.

ಚಂಪಾ ನಿಧನಕ್ಕೆ ಸಂತಾಪ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. “ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ, ಅಭಿಮಾನಿಗಳು ಮತ್ತು ಶಿಷ್ಯರಿಗೆ ಆ ದೇವರು ಕರುಣಿಸಲಿ” ಎಂದು ಮುಖ್ಯಮಂತ್ರಿಯವರು ಸಂತಾಪ ವ್ಯಕ್ತ ಪಡಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಟ್ವೀಟ್ ಮಾಡಿ, “ಅನ್ಯಾಯ, ಅಸಮಾನತೆ,‌‌ ಸರ್ವಾಧಿಕಾರದ ವಿರುದ್ದ ಸಿಡಿಯುತ್ತಲೇ ಇದ್ದ ಹುಟ್ಟು ಬಂಡಾಯಗಾರ, ವೈಚಾರಿಕ ಗುರು ಮತ್ತು ನನ್ನ ದೀರ್ಘಕಾಲದ ಸ್ನೇಹಿತರಾಗಿದ್ದ ಪ್ರೊ.ಚಂದ್ರಶೇಖರ ಪಾಟೀಲ್ ನಿಧನದಿಂದ ದು:ಖಿತನಾಗಿದ್ದೇನೆ. ಇವರ ಕುಟುಂಬ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಭಾವಪೂರ್ಣ ಶ್ರದ್ಧಾಂಜಲಿ” ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿ, “ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ. ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ” ಎಂದಿದ್ದಾರೆ.

ಅನೇಕ ಬರಹಗಾರರು ಚಂಪಾ ಅವರ ಕವಿತೆಯನ್ನು ಹಂಚಿಕೊಂಡಿದ್ದಾರೆ.

ಪ್ರಶ್ನೋತ್ತರ


ಸತ್ತವರು ಎಲ್ಲಿ ಹೋಗುತ್ತಾರೆ?
ಸತ್ತವರು ಎಲ್ಲೂ ಹೋಗುವುದಿಲ್ಲ…
ಇದ್ದವರ ನೆನಪಿನ ಗುದ್ದಿನಲ್ಲಿ
ಗುದ್ದಲಿಯಾಗುತ್ತಾರೆ.
ಅವರ ಶ್ವಾಸೋಚ್ಛ್ವಾಸದ ಹಳ್ಳ ಕೊಳ್ಳಗಳಲ್ಲಿ
ಹಾವಾಗಿ ಹರಿದಾಡುತ್ತಾರೆ.
ಅವರ ಆಕಾಶದ ತುಂಬ
ಹುಡಿಯಾಗಿ ಅಡರುತ್ತಾರೆ.
ಹಕ್ಕಿಯಾಗಿ ರೆಕ್ಕೆ ಬಿಚ್ಚುತ್ತಾರೆ.
ಚಿಕ್ಕೆಯಾಗಿ ಚಿಮುಕುತ್ತಾರೆ.
ಎಲ್ಲಿಯ ತನಕ?
ಇದ್ದವರು ಸಾಯುವ ತನಕ.
ಸತ್ತವರು ಎಲ್ಲಿ ಹೋಗುತ್ತಾರೆ?
ಸತ್ತವರು ಎಲ್ಲೂ ಹೋಗುವುದಿಲ್ಲ…
(1986)


-ಚಂದ್ರಶೇಖರ ಪಾಟೀಲ


ಕೃಪೆ: -‘ಅರ್ಧ ಸತ್ಯದ ಹುಡುಗಿ’ (ಕವನ ಸಂಕಲನ, 1989)


ಇದನ್ನೂ ಓದಿರಿ: ಹರಿಯೋ ನೀರು, ಉರಿಯೋ ಸೂರ್ಯನ ತಡೆಯಲಾಗಲ್ಲ, ಮೇಕೆದಾಟು ಹೋರಾಟ ನಿಲ್ಲಿಸಲಾಗಲ್ಲ: ಡಿ.ಕೆ.ಶಿವಕುಮಾರ್‌‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...