ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಸೂರಜ್ ರೇವಣ್ಣ ಅವರನ್ನು ಪೊಲೀಸರು ‘ಶಾಸಕರು-ಸಂಸದರ ವಿರುದ್ದದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ (42ನೇ ಎಸಿಎಂಎಂ) ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್ ಶಿವಕುಮಾರ್ ಅವರ ಕೋರಮಂಗಲದಲ್ಲಿರುವ ನಿವಾಸದಲ್ಲಿ ಭಾನುವಾರ ಸಂಜೆ ಹಾಜರುಪಡಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರು, ಸೂರಜ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸೂರಜ್ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377, 342 ಹಾಗೂ 506ರ ಅಡಿ ಪ್ರಕರಣ ದಾಖಲಾಗಿದೆ.
ಹಾಸನದ ಅರಕಲಗೂಡು ಮೂಲದ ಯುವಕನ ದೂರಿನ ಹಿನ್ನೆಲೆ, ಶನಿವಾರ (ಜೂನ್ 23) ರಾತ್ರಿ 7:30ರ ಸುಮಾರಿಗೆ ಸೂರಜ್ ಅವರನ್ನು ಹಾಸನದ ಸಿಇಎನ್ ಪೊಲೀಸ್ ಠಾಣೆಗೆ ಕರೆ ತಂದಿದ್ದ ಪೊಲೀಸರು, ಸಂತ್ರಸ್ತ ಯುವಕ ಮತ್ತು ಸೂರಜ್ ಆಪ್ತ ನೀಡಿರುವ ದೂರುಗಳ ಪ್ರತ್ಯೇಕ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದರು.
ಈ ನಡುವೆ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿರುವುದರಿಂದ ಹಾಸನದಿಂದ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಭಾನುವಾರ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಸೂರಜ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಪೊಲೀಸರು, ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
ಇದನ್ನೂ ಓದಿ : ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡ ಹರತಾಳು ಹಾಲಪ್ಪ ಆಪ್ತ ಅರುಣ್ ಕುಗ್ವೆ ಬಂಧನ


