ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಸ್ಥಾನದಿಂದ ಡಾ. ಶಾಂತ್ ಎ ತಿಮ್ಮಯ್ಯ ಅವರನ್ನು ವಜಾಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ (ಮೇ 31) ಆದೇಶ ಹೊರಡಿಸಿದೆ.
ಮಂಡಳಿಯ ಪ್ರಚಾರ ಜಾಹೀರಾತು ನೀಡುವಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪ ಶಾಂತ್ ಎ ತಿಮ್ಮಯ್ಯ ಅವರ ವಿರುದ್ಧ ಕೇಳಿ ಬಂದಿತ್ತು.
ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳ ಮಂಜೂರಾತಿಯಲ್ಲಿ ಪಾರದರ್ಶಕತೆ ಕಾಯ್ದೆ ಉಲ್ಲಂಘಿಸಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ಕಡೆಗಣಿಸಿ ಖಾಸಗಿ ಜಾಹೀರಾತು ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿ ಶಾಂತ್ ತಿಮ್ಮಯ್ಯ ಸಾರ್ವಜನಿಕ ಹಣದ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ತನಿಖೆಗೆ ಸರ್ಕಾರ ಆದೇಶಿಸಿತ್ತು.
ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಮಹದೇವ ಅವರು ತನಿಖೆ ನಡೆಸಿ ಸಲ್ಲಿಸಿದ ವರದಿಯನ್ನು ಆಧರಿಸಿ ಸರ್ಕಾರ ಕ್ರಮ ಕೈಗೊಂಡಿದೆ. ಮಂಡಳಿಯ ಸದಸ್ಯ ಸ್ಥಾನದಿಂದಲೂ ಶಾಂತ್ ತಿಮ್ಮಯ್ಯ ಅವರನ್ನು ಅನರ್ಹಗೊಳಿಸಲಾಗಿದೆ.
ಇವರಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ, ಮುಂದಿನ ಆದೇಶದವರೆಗೆ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಿ.ಪಿ ರವಿ ಅವರನ್ನು ಅಧ್ಯಕ್ಷರನ್ನಾಗಿ ಹೆಚ್ಚುವರಿ ಪ್ರಭಾರದಲ್ಲಿರಿಸಿ ನಾಮ ನಿರ್ದೇಶನ ಮಾಡಲಾಗಿದೆ. ಈ ಸಂಬಂಧ ಅರಣ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎನ್ ಪ್ರವೀಣ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಶಾಂತ್ ತಿಮ್ಮಯ್ಯ ಅವರ ಹುದ್ದೆಯ ಅವಧಿ 2022ರಲ್ಲೇ ಮುಗಿದಿದ್ದು, ಅವರನ್ನು ವಜಾ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ತನ್ನನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಶಾಂತ್ ತಿಮ್ಮಯ್ಯ ಅವರು ಇತ್ತೀಚೆಗೆ ಹೈಕೋರ್ಟ್‌ಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ, ಸರ್ಕಾರದ ಅಧಿಸೂಚನೆಯನ್ನು ಅಮಾನತ್ತಿನಲ್ಲಿಟ್ಟು ಮಧ್ಯಂತರ ಆದೇಶ ಮಾಡಿ ವಿಚಾರಣೆಯನ್ನು ಸೆ.7ಕ್ಕೆ ಮುಂದೂಡಿತ್ತು.
ಇದನ್ನೂ ಓದಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ


