ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ನಿರ್ಧಾರ ಖಂಡಿಸಿ ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾಮಾಜಿಕ ಕಾರ್ಯಕರ್ತ ನಿಧನರಾದ ಘಟನೆ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಇಂದು (ಆ.19) ನಡೆದಿದೆ.
ಮೃತ ವ್ಯಕ್ತಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಕೋಲಾರ ಜಿಲ್ಲೆ ಕುರುಬರ ಸಂಘದ ಅಧ್ಯಕ್ಷ ಸಿ ಕೆ ರವಿಚಂದ್ರ (63) ಎಂದು ವರದಿಗಳು ಹೇಳಿವೆ.
ಸಿಎಂ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ನಿರ್ಧಾರದ ಬಗ್ಗೆ ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಇಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ದಲಿತ ಅಲ್ಪಸಂಖ್ಯಾತರ ಸಂಘದಿಂದ ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಸಿ ಕೆ ರವಿಚಂದ್ರನ್ ಎನ್ನುವವರು ಹೃದಯಾಘಾಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ. pic.twitter.com/rdmuofsdwe
— eedina.com ಈ ದಿನ.ಕಾಮ್ (@eedinanews) August 19, 2024
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ದಲಿತ ಅಲ್ಪಸಂಖ್ಯಾತರ ಸಂಘದಿಂದ ಸುದ್ದಿಗೋಷ್ಠಿ ಕರೆಯಲಾಗಿತ್ತು. ಸಂಘಟನೆಯಿಂದ ಬಂದಿದ್ದವರನ್ನು ಹೆಸರೆತ್ತಿ, ಸಿ ಕೆ ರವಿಚಂದ್ರನ್ ಮಾಧ್ಯಮದವರಿಗೆ ಪರಿಚಯ ಮಾಡುತ್ತಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಆಟೋದಲ್ಲಿ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಇದನ್ನೂ ಓದಿ : ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ: ಸಿದ್ದರಾಮಯ್ಯ


