ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಉದ್ದೇಶದಿಂದ ಸಂಸತ್ತಿನ ವಿಶೇಷ ಅಧಿವೇಶನ ಕರೆಯಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬ ವರದಿಗಳ ಬಗ್ಗೆ ಪ್ರತಿಪಕ್ಷಗಳಿಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ (ನ.13) ಹೇಳಿದ್ದಾರೆ.
ಬುಧವಾರದಿಂದ ಆರಂಭವಾಗಿರುವ ತಮ್ಮ ನಾಲ್ಕು ದಿನಗಳ ಕ್ಷೇತ್ರ ಪ್ರವಾಸದ ಭಾಗವಾಗಿ ಪ್ರಿಯಾಂಕಾ ಗಾಂಧಿ ವಯನಾಡಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ಕ್ಷೇತ್ರ ಮರುವಿಂಗಡಣೆ ಮಸೂದೆ ಕುರಿತು ಚರ್ಚಿಸಲು ಕೇಂದ್ರ ಸರ್ಕಾರ ಸಂಸತ್ತಿನ ವಿಶೇಷ ಅಧಿವೇಶನ ಕರೆಯಲು ಯೋಜಿಸುತ್ತಿದೆ ಎಂಬ ವರದಿಗಳ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
“ಅವರು ಈ ಬಗ್ಗೆ ಪ್ರತಿಪಕ್ಷಗಳಿಗೆ ಯಾವುದೇ ಮಾಹಿತಿ ನೀಡಿಲ್ಲ. ಹಾಗಾಗಿ, ಒಂದು ವೇಳೆ ಅವರು ಅಧಿವೇಶನ ನಡೆಸಲು ಯೋಜಿಸುತ್ತಿದ್ದರೆ ಅದರ ಬಗ್ಗೆ ನನಗೆ ತಿಳಿದಿಲ್ಲ. ಸದ್ಯಕ್ಕೆ ಈ ಕುರಿತು ನನ್ನ ಬಳಿ ಯಾವುದೇ ಮಾಹಿತಿಯಿಲ್ಲ” ಎಂದು ಅವರು ಹೇಳಿದರು.
ಕೇಂದ್ರ ಸರ್ಕಾರದ ವಿವಿಧ ನಡೆಗಳ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಗಳ ಕುರಿತು ಮಾತನಾಡಿದ ಪ್ರಿಯಾಂಕಾ, ಭಿನ್ನಮತ ವ್ಯಕ್ತಪಡಿಸುವವರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿದರು.
“ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅಥವಾ ಏನನ್ನಾದರೂ ಹೇಳಲು ಬಯಸುವ ಯಾರನ್ನಾದರೂ ಮೌನಗೊಳಿಸಲಾಗುತ್ತಿದೆ. ಅವರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಇಂತಹ ಘಟನೆಗಳು ನಡೆಯುತ್ತಿರುವುದನ್ನು ನಾವು ನೋಡುತ್ತಿದ್ದೇವೆ” ಎಂದು ಅವರು ಹೇಳಿದರು.
“ನಾವು ಸಂವಿಧಾನ ಮತ್ತು ಅದರ ಮೌಲ್ಯಗಳ ರಕ್ಷಣೆಗಾಗಿ ಹೋರಾಡುತ್ತಿದ್ದೇವೆ. ನಮ್ಮ ದೇಶದಲ್ಲಿ ಸಂವಿಧಾನ ಮತ್ತು ಅದರ ಮೌಲ್ಯಗಳನ್ನು ಎತ್ತಿಹಿಡಿಯಬೇಕಾದ ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನು ಬಿಜೆಪಿ ವ್ಯವಸ್ಥಿತವಾಗಿ ನಾಶಪಡಿಸುತ್ತಿದೆ. ಇದರ ವಿರುದ್ಧ ನಾವು ಹೋರಾಟ ನಡೆಸುತ್ತಿದ್ದೇವೆ” ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದರು.


