ವಿಶೇಷ ಚೇತನ (ಮಾನಸಿಕ ಅಸ್ವಸ್ಥೆ, ಕಿವುಡು ಹಾಗೂ ಮೂಗಿ) ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ನಡೆದಿದೆ.
ಅತ್ಯಾಚಾರಕ್ಕೂ ಮುನ್ನ ನಿರ್ಜನ ಪ್ರದೇಶದ ರಸ್ತೆಯಲ್ಲಿ ದುಷ್ಕರ್ಮಿಗಳು ಯುವತಿಯನ್ನು ಬೈಕ್‌ನಲ್ಲಿ ಬೆನ್ನಟ್ಟಿಕೊಂಡು ಹೋದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯ ಇಬ್ಬರು ಶಂಕಿತ ಆರೋಪಿಗಳನ್ನು ಸೆರೆ ಹಿಡಿಯಲು ಸಹಾಯ ಮಾಡಿತು ಎಂದು ಪೊಲೀಸರು ಬುಧವಾರ (ಆ.13) ತಿಳಿಸಿದ್ದಾರೆ.
ಪೊಲೀಸರು ಫೈರಿಂಗ್ ನಡೆಸಿ ಇಬ್ಬರು ಆರೋಪಿಗಳಾದ ಅಂಕೂರ್ ವರ್ಮಾ ಮತ್ತು ಹರ್ಷಿತ್ ಪಾಂಡೆ ಎಂಬವರನ್ನು ಬಂಧಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿಗಳು ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಕಾಸ್ ಕುಮಾರ್ ಹೇಳಿದ್ದಾರೆ.
ಎರಡು ದಿನಗಳ ಹಿಂದೆ ಸಂತ್ರಸ್ತೆಯ ಸಹೋದರ ಕೊತ್ವಾಲಿ ದೇಹತ್ ಪೊಲೀಸ್ ಠಾಣೆಗೆ ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂತು. ದೂರು ಆಧರಿಸಿ ಸೋಮವಾರ (ಆ.11) ಎಫ್‌ಐಆರ್ ದಾಖಲಿಸಲಾಗಿತ್ತು. ತಕ್ಷಣ ತನಿಖೆ ಆರಂಭಿಸಲಾಗಿತ್ತು ಎಂದು ಎಸ್‌ಪಿ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.
ಸಂತ್ರಸ್ತೆ ಮಾವನ ಮನೆಯಿಂದ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ, ದಾರಿ ಮಧ್ಯೆ ಆಕೆಯನ್ನು ಬಲವಂತವಾಗಿ ಬೈಕ್‌ನಲ್ಲಿ ಕರೆದೊಯ್ದ ಅಪರಿಚಿತರ ಗುಂಪು, ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿದೆ ಎಂದು ಸಹೋದರ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.
ದೌರ್ಜನ್ಯ ನಡೆದ ಸ್ಥಳವನ್ನು ಪರಿಶೀಲನೆ ನಡೆಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ತನಿಖೆಯನ್ನು ತ್ವರಿತಗೊಳಿಸಲು ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸಿ ಸಿಸಿಟಿವಿ ದೃಶ್ಯಾವಳಿಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದ್ದಾರೆ ಎಂದು ಹೆಚ್ಚುವರಿ ಎಸ್ಪಿ ವಿಶಾಲ್ ಪಾಂಡೆ ತಿಳಿಸಿದ್ದಾರೆ.
ಸಂತ್ರಸ್ತೆ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದ ಮುಂದಿನ ಕಾನೂನು ಕ್ರಮಗಳು ನಡೆಯುತ್ತಿವೆ ಎಂದು ವಿಶಾಲ್ ಪಾಂಡೆ ಹೇಳಿದ್ದಾರೆ.


