ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮುನ್ಸೂಚನೆ ನೀಡಿದೆ.
ರಾಜ್ಯದ 61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳು ಸೇರಿ ಒಟ್ಟು 301 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿಯನ್ನು ನಿಗದಿ ಮಾಡಿ ನಗಾರಭಿವೃದ್ದಿ ಇಲಾಖೆ ಆದೇಶ ಹೊರಡಿಸಿದೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ನಿಗದಿ ಮಾಡಿದ್ದ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿಯಲ್ಲಿನ ಲೋಪ, ಪುನರಾವರ್ತನೆ ಪ್ರಶ್ನಿಸಿ ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ರಾಜ್ಯ ಸರ್ಕಾರ ತಾನು ನಿಗದಿ ಮಾಡಿದ್ದ ಮೀಸಲಾತಿ ಪಟ್ಟಿಯನ್ನು 2022ರ ಸೆಪ್ಟೆಂಬರ್‌ನಲ್ಲಿ ಪ್ರಮಾಣ ಪತ್ರದ ಮೂಲಕ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿತ್ತು. ಪುನರಾವರ್ತನೆಗೆ ಅವಕಾಶ ಇಲ್ಲದಂತೆ ನಿಯಮನುಸಾರವೇ ಎಲ್ಲಾ ವರ್ಗಗಳಿಗೂ ನ್ಯಾಯ ಒದಗಿಸಲಾಗಿದೆ ಎಂದಿತ್ತು.
ಮೀಸಲಾತಿ ಸಂಬಂಧ ಇದ್ದ ಎಲ್ಲಾ ಪ್ರಕರಣಗಳನ್ನು ನ್ಯಾಯಾಲಯ ಇತ್ಯರ್ಥ ಮಾಡಿದ್ದು, ರಾಜ್ಯ ಸರ್ಕಾರ ನಿಗದಿ ಮಾಡಿದ್ದ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನು ಎತ್ತಿ ಹಿಡಿದಿತ್ತು. ನ್ಯಾಯಾಲಯದ ಅನುಮತಿ ದೊರೆತ ಬೆನ್ನಲ್ಲೇ ಸರ್ಕಾರ ಪಟ್ಟಿ ಪ್ರಕಟಿಸಿದೆ.
ಹೈಕೋರ್ಟ್‌ಗೆ ಮಾಹಿತಿ ನೀಡಿದ ಸರ್ಕಾರ :
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಲು ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಸಯ್ಯದ್ ನಸ್ರುಲ್ಲಾ ಸೇರಿದಂತೆ ಚಿತ್ರದುರ್ಗ, ಬನ್ನೂರು ಮತ್ತು ಕುಶಾಲನಗರ ಸ್ಥಳೀಯ ಸಂಸ್ಥೆಗಳ ಇತರೆ ಚುನಾಯಿತಿ ಪ್ರತಿನಿಧಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರ ಏಕಸದಸ್ಯ ಪೀಠ ನಡೆಸಿತು.
ರಾಜ್ಯ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು, ಮೀಸಲು ನಿಗದಿಪಡಿಸಿ ಹೊರಡಿಸಿರುವ ಗೆಜೆಟ್ ಅಧಿಸೂಚನೆಯನ್ನು ಪೀಠಕ್ಕೆ ಸಲ್ಲಿಸಿದರು.
ಅಲ್ಲದೆ, ರಾಜ್ಯದ 117 ಪಟ್ಟಣ ಪಂಚಾಯಿತಿ, 123 ಪುರಸಭೆ ಮತ್ತು 61 ನಗರಸಭೆಗಳ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಮೀಸಲು ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ವಿವರಿಸಿದರು.
ಇದನ್ನೂ ಓದಿ : ಬಾಂಗ್ಲಾದೇಶ | ಮಾಜಿ ಪ್ರಧಾನಿ ಖಾಲಿದಾ ಝಿಯಾ ಬಿಡುಗಡೆಗೆ ಅಧ್ಯಕ್ಷರ ಆದೇಶ : ಇಂದು ಸೇನೆಯಿಂದ ಸರ್ಕಾರ ರಚನೆ ಸಾಧ್ಯತೆ