2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ವರ್ಷಗಳಿಂದ ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಅವರಿಗೆ ತಕ್ಷಣ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಬುಧವಾರ (ನ.25) ನಿರಾಕರಿಸಿದೆ.
ಉಮರ್ ಪರ ವಕೀಲರು ಮಧ್ಯಂತರ ಜಾಮೀನಿಗೆ ಮನವಿ ಮಾಡಿದಾಗ, ‘ಇಂದು ಬೇಡ’ ಎಂದು ಹೇಳಿದ ನ್ಯಾಯಾಲಯ, ಮೊದಲು ದೆಹಲಿ ಪೊಲೀಸರ ವಾದವನ್ನು ಆಲಿಸುವುದಾಗಿ ತಿಳಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೊಹನಾ ಅವರನ್ನೊಳಗೊಂಡ ನ್ಯಾಯಪೀಠವು, 2020ರ ದೆಹಲಿ ಗಲಭೆಯ ‘ದೊಡ್ಡ ಸಂಚು’ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮರ್ ಖಾಲಿದ್ ಮತ್ತು ಸಹ ಆರೋಪಿ ಶರ್ಜೀಲ್ ಇಮಾಮ್ ಸಲ್ಲಿಸಿರುವ ಹೊಸ ಜಾಮೀನು ಅರ್ಜಿಗಳ ಕುರಿತು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ. ಪೊಲೀಸರ ವಾದವನ್ನು ಆಲಿಸಿದ ಬಳಿಕವಷ್ಟೇ ಮಧ್ಯಂತರ ಜಾಮೀನು ನೀಡುವ ಮನವಿಯನ್ನು ಪರಿಗಣಿಸುವುದಾಗಿ ನ್ಯಾಯಪೀಠ ಸ್ಪಷ್ಟಪಡಿಸಿದೆ.
ಉಮರ್ ಖಾಲಿದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಮಾಜಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿಯಾಗಿರುವ ಖಾಲಿದ್ ಈಗಾಗಲೇ ಆರು ವರ್ಷಗಳಿಗೂ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೀಗಾಗಿ ಅವರಿಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.
ಇದೇ ರೀತಿಯ ಮನವಿಯನ್ನು ಶರ್ಜೀಲ್ ಇಮಾಮ್ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ದವೆ ಕೂಡ ಮಂಡಿಸಿದರು. ದೀರ್ಘಕಾಲದಿಂದ ಜೈಲಿನಲ್ಲಿರುವ ಹಿನ್ನೆಲೆಯಲ್ಲಿ ಇಮಾಮ್ ಅವರಿಗೂ ಮಧ್ಯಂತರ ಜಾಮೀನು ನೀಡಬೇಕು ಎಂದು ಅವರು ಕೋರಿದರು. ಆದರೆ, ಇಬ್ಬರ ಮನವಿಗೂ ನ್ಯಾಯಪೀಠ ಒಂದೇ ರೀತಿಯ ಉತ್ತರ ನೀಡಿತು.
ದೆಹಲಿ ಪೊಲೀಸರ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈ ಪ್ರಕರಣದ ಉಲ್ಲೇಖ ಆದೇಶವೂ ಇದೇ ಪ್ರಥಮ ಮಾಹಿತಿ ವರದಿಗೆ (ಎಫ್‌ಐಆರ್) ಸಂಬಂಧಿಸಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಮತ್ತೆ ಸುಪ್ರೀಂ ಕೋರ್ಟ್‌ಗೆ ಬಂದಿದ್ದೇಕೆ?
ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರನ್ನು ಕ್ರಮವಾಗಿ 2020ರ ಸೆಪ್ಟೆಂಬರ್ ಮತ್ತು ಆಗಸ್ಟ್ ತಿಂಗಳಲ್ಲಿ ಬಂಧಿಸಲಾಗಿತ್ತು.
2026ರ ಜನವರಿಯಲ್ಲಿ ಇದೇ ಪ್ರಕರಣದ ಇತರ ಐವರು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ, ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿತ್ತು. ಅಲ್ಲದೆ, ಸಂರಕ್ಷಿತ ಸಾಕ್ಷಿಗಳ ವಿಚಾರಣೆ ಪೂರ್ಣಗೊಳ್ಳುವವರೆಗೆ ಅಥವಾ ಒಂದು ವರ್ಷ ಮುಗಿಯುವವರೆಗೆ, ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮತ್ತೆ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ನಿರ್ಬಂಧ ವಿಧಿಸಿತ್ತು.
ಇದೀಗ ಸಲ್ಲಿಸಿರುವ ಹೊಸ ಅರ್ಜಿಗಳಲ್ಲಿ, ಪ್ರಾಸಿಕ್ಯೂಷನ್ ಇನ್ನೂ ಸಂರಕ್ಷಿತ ಸಾಕ್ಷಿಗಳ ವಿಚಾರಣೆಯನ್ನು ಪೂರ್ಣಗೊಳಿಸಿಲ್ಲ ಎಂದು ಇಬ್ಬರೂ ವಾದಿಸಿದ್ದಾರೆ. ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ವಿಧಿಸಲಾಗಿದ್ದ ಒಂದು ವರ್ಷದ ನಿರ್ಬಂಧದ ಅವಧಿಯೂ ಮುಕ್ತಾಯದ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಈ ಹಿಂದೆ ವಿಧಿಸಿದ್ದ ಷರತ್ತುಗಳನ್ನು ಬದಲಾಯಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಇಬ್ಬರೂ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ತ್ರಿಸದಸ್ಯ ಪೀಠ ರಚನೆಯ ಸಾಧ್ಯತೆ
ಈ ಪ್ರಕರಣವನ್ನು ವಿಚಾರಣೆ ನಡೆಸಲು ಮೂವರು ನ್ಯಾಯಮೂರ್ತಿಗಳನ್ನೊಳಗೊಂಡ ಪೀಠ ರಚಿಸುವಂತೆ ಆಡಳಿತಾತ್ಮಕ ಕ್ರಮ ಕೈಗೊಳ್ಳಲು ಮುಖ್ಯ ನ್ಯಾಯಮೂರ್ತಿಗಳ ಮುಂದೆ ಪ್ರಕರಣವನ್ನು ಮಂಡಿಸುವಂತೆ ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.
ಇದಕ್ಕೆ ಮೇ 22ರಂದು ತಸ್ಲೀಮ್ ಅಹ್ಮದ್ ಪ್ರಕರಣದಲ್ಲಿ ನೀಡಲಾಗಿದ್ದ ಉಲ್ಲೇಖ ಆದೇಶವೂ ಕಾರಣವಾಗಿದೆ. ಕಠಿಣ ಕಾನೂನುಗಳಾದ ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಿಚಾರಣೆಯ ವಿಳಂಬ ಮತ್ತು ದೀರ್ಘಕಾಲದ ಜೈಲುವಾಸವು ಜಾಮೀನು ನೀಡಲು ಆಧಾರವಾಗಬಹುದೇ ಎಂಬ ಕಾನೂನು ಪ್ರಶ್ನೆಯನ್ನು ಸುಪ್ರೀಂ ಕೋರ್ಟ್ ದೊಡ್ಡ ಪೀಠದ ಪರಿಶೀಲನೆಗೆ ಒಪ್ಪಿಸಿತ್ತು.
ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿದ್ದ ಜನವರಿ ತಿಂಗಳ ತೀರ್ಪು ಹಾಗೂ ದೀರ್ಘಕಾಲದ ಜೈಲುವಾಸದ ಹಿನ್ನೆಲೆಯಲ್ಲಿ ಜಾಮೀನು ನೀಡಬಹುದೆಂದು ಪ್ರತಿಪಾದಿಸುವ ಹಿಂದಿನ ಕೆ.ಎ. ನಜೀಬ್ ತೀರ್ಪಿನ ನಡುವೆ ಕೆಲವು ವ್ಯತ್ಯಾಸಗಳಿರುವುದನ್ನು ಆ ಉಲ್ಲೇಖ ಆದೇಶದಲ್ಲಿ ನ್ಯಾಯಾಲಯ ಗಮನಿಸಿತ್ತು.
ಇದೇ ಪ್ರಕರಣದಲ್ಲಿ ತಸ್ಲೀಮ್ ಅಹ್ಮದ್ ಮತ್ತು ಖಾಲಿದ್ ಸೈಫಿ ಅವರಿಗೆ ಸುಪ್ರೀಂ ಕೋರ್ಟ್ ಆರು ತಿಂಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
2020ರ ದೆಹಲಿ ಗಲಭೆ
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಸಿಆರ್) ವಿರುದ್ಧ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಗಲಭೆ ಸಂಭವಿಸಿತ್ತು. ಈ ಗಲಭೆಯಲ್ಲಿ 53 ಮಂದಿ ಮೃತಪಟ್ಟಿದ್ದು, 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಗಲಭೆಗೆ ಸಂಬಂಧಿಸಿದಂತೆ ದಾಖಲಾದ ‘ದೊಡ್ಡ ಸಂಚು’ ಪ್ರಕರಣದಲ್ಲಿ ಉಮರ್ ಖಾಲಿದ್ ಸೇರಿದಂತೆ ಹಲವರ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


