ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ನಾಯಕಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಆ.27) ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ವಿಚಾರಣೆಯ ಸಂದರ್ಭದಲ್ಲಿ, ಪ್ರಾಸಿಕ್ಯೂಷನ್ ಏಜೆನ್ಸಿಯ (ಸಿಬಿಐ/ಇಡಿ) ನ್ಯಾಯಸಮ್ಮತತೆಯನ್ನು ಪ್ರಶ್ನಿಸಿದೆ. ಆಯ್ದ ಆರೋಪಿಗಳ ಪ್ರಕರಣಗಳಲ್ಲಿ ಮಾತ್ರ ಸಕಾರಾತ್ಮಕವಾಗಿ ಸ್ಪಂದಿಸುವ ಅವುಗಳ ಪಕ್ಷಪಾತ ನಡೆಯನ್ನು ಟೀಕಿಸಿದೆ.
ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿರುವುದನ್ನು ಪ್ರಶ್ನಿಸಿ ಕವಿತಾ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿಬಿಐ ಮತ್ತು ಇಡಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿತ್ತು.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಎಎಪಿ ನಾಯಕಿ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನೀಡಲಾಗಿದೆ ಎಂಬ ಅಂಶವನ್ನು ಕವಿತಾ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.
ಕವಿತಾ ಅವರು ತಮ್ಮ ಮೊಬೈಲ್ ನಾಶಪಡಿಸಿದ್ದಾರೆ. ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಆದ್ದರಿಂದ ಅವರಿಗೆ ಜಾಮೀನು ನೀಡಬಾರದು ಎಂದು ತನಿಖಾ ಸಂಸ್ಥೆಗಳ ಪರ ನ್ಯಾಯಾಲಯಕ್ಕೆ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಪ್ರತಿಪಾದಿಸಿದ್ದಾರೆ.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಎರಡೂ ಪ್ರಕರಣಗಳಲ್ಲಿ ತಲಾ 10 ಲಕ್ಷ ರೂ.ಗಳ ಬಾಂಡ್‌ಗಳನ್ನು ಒದಗಿಸುವ ಮೂಲಕ ಕವಿತಾ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಅನುಮತಿ ನೀಡಿದೆ. ನ್ಯಾಯಾಲಯವು ಪಾಸ್‌ಪೋರ್ಟ್ ಅನ್ನು ವಶಕ್ಕೆ ನೀಡುವಂತೆ ಕವಿತಾ ಅವರಿಗೆ ನಿರ್ದೇಶಿಸಿದ್ದು, ಆಕೆ ಶ್ಯೂರಿಟಿಗಳ ಮೇಲೆ ಪ್ರಭಾವ ಬೀರಲು ಅಥವಾ ಬೆದರಿಸಲು ಪ್ರಯತ್ನಿಸಬಾರದು ಎಂದಿದೆ.
ಕವಿತಾ ಅವರನ್ನು ಮಾರ್ಚ್ 15 ರಂದು ಸಂಜೆ ಇಡಿ ಬಂಧಿಸಿತ್ತು. ಅಂದಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಅಲ್ಲಿಂದಲೇ ಅವರನ್ನು ಸಿಬಿಐ ಬಂಧಿಸಿತ್ತು.
ಇದನ್ನೂ ಓದಿ : ಹೈದರಾಬಾದ್ | ರಾಜಕೀಯ ಕಿತ್ತಾಟಕ್ಕೆ ಕಾರಣವಾದ ‘HYDRA’ ಒತ್ತುವರಿ ತೆರವು


