ನ್ಯಾಯಾಂಗದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ, ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕಗೊಳಿಸಲು ಒಪ್ಪಿಕೊಂಡಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.
ಏಪ್ರಿಲ್ 1ರಂದು ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಬಹಿರಂಗಪಡಿಸಲು ನಿರ್ಧರಿಸಿದ್ದಾರೆ. ನ್ಯಾಯಾಧೀಶರು ಹಂಚಿಕೊಳ್ಳುವ ಆಸ್ತಿ ವಿವರಗಳು ಸಾರ್ವಜನಿಕರಿಗೆ ಲಭ್ಯವಾಗುವಂತೆ ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.
ದೆಹಲಿ ಹೈಕೋರ್ಟ್‌ನಿಂದ ಮೂಲಸ್ಥಾನ ಅಲಹಾಬಾದ್ ಹೈಕೋರ್ಟ್‌ಗೆ ಇತ್ತೀಚೆಗೆ ವರ್ಗಾವಣೆಯಾಗಿರುವ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ದೆಹಲಿಯ ಸರ್ಕಾರಿ ನಿವಾಸದಲ್ಲಿ ಭಾರೀ ಪ್ರಮಾಣದಲ್ಲಿ ಹಣ ಪತ್ತೆಯಾದ ಬಳಿಕ ನ್ಯಾಯಾಧೀಶರು ಈ ನಿರ್ಧಾರ ಕೈಗೊಂಡಿದ್ದಾರೆ.
ನ್ಯಾಯಾಧೀಶರ ಆಸ್ತಿ ಘೋಷಣೆ ಹೇಗೆ ಮಾಡಬೇಕು ಎಂಬುದಕ್ಕೆ ನಿರ್ದಿಷ್ಟ ವಿಧಾನಗಳನ್ನು ಸರಿಯಾದ ಸಮಯದಲ್ಲಿ ಅಂತಿಮಗೊಳಿಸಲಾಗುತ್ತದೆ ಎಂದು ವರದಿ ಹೇಳಿದೆ.
ಪ್ರಸ್ತುತ, ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಘೋಷಿಸಿಕೊಂಡಿದ್ದಾರೆ. ಆದರೆ, ಅದನ್ನು ಸಾರ್ವಜನಿಕಗೊಳಿಸಿಲ್ಲ.
ನ್ಯಾಯಮೂರ್ತಿ ಯಶವಂತ್ ವರ್ಮಾ ಮನೆಯಲ್ಲಿ ಹಣ ಪತ್ತೆ
ನ್ಯಾಯಮೂರ್ತಿ ಯಶವಂತ್ ವರ್ಮಾ ಊರಲ್ಲಿ ಇಲ್ಲದ ವೇಳೆ, ಮಾರ್ಚ್ 14 ರಂದು ಬೆಳಿಗ್ಗೆ 11.30ಕ್ಕೆ ದೆಹಲಿಯ ನ್ಯಾಯಾಂಗ ಬಡಾವಣೆಯ ಅವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಕುಟುಂಬಸ್ಥರು ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಅಗ್ನಿಶಾಮಕದ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಂತರ ಮನೆಯ ಒಂದು ಕೋಣೆಯಲ್ಲಿ ಪೊಲೀಸರಿಗೆ ಭಾರೀ ಪ್ರಮಾಣದ ಹಣ ಕಂಡು ಬಂದಿತ್ತು.
ಈ ಬಗ್ಗೆ ಸ್ಥಳೀಯ ಪೊಲೀಸರು ಅವರ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅವರು ಹಿರಿಯ ಸರ್ಕಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಮಾಹಿತಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ತಲುಪಿತ್ತು. ಅವರು ಗುರುವಾರ (ಮಾ.20) ಸಂಜೆ ತುರ್ತು ಕೊಲಿಜಿಯಂ ಸಭೆ ಕರೆದಿದ್ದರು. ಕೊಲಿಜಿಯಂ, ನ್ಯಾಯಮೂರ್ತಿ ವರ್ಮಾ ಅವರನ್ನು ಅವರ ಮಾತೃ ನ್ಯಾಯಾಲಯವಾದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಸರ್ವಾನುಮತದಿಂದ ನಿರ್ಧರಿಸಿತ್ತು.
ನ್ಯಾಯಮೂರ್ತಿ ವರ್ಮಾ ಅವರನ್ನು ಪ್ರಸ್ತುತ ಅವರ ಮೂಲ ನ್ಯಾಯಾಲಯವಾದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ. ಅವರ ವಿರುದ್ದ ಸುಪ್ರೀಂ ಕೋರ್ಟ್ ಆಂತರಿಕ ತನಿಖೆ ಕೈಗೆತ್ತಿಕೊಂಡಿದೆ. ಅಲಹಾಬಾದ್ ಹೈಕೋರ್ಟ್ ವಕೀಲರು ವರ್ಮಾ ಅವರನ್ನು ನಮಲ್ಲಿಗೆ ಕಳುಹಿಸಬೇಡಿ ಎಂದು ಇತ್ತೀಚೆಗೆ ಪ್ರತಿಭಟಿಸಿದ್ದರು. ನ್ಯಾಯಾಧೀಶರ ಮನೆಯಲ್ಲಿ ಹಣ ಪತ್ತೆಯಾಗಿರುವುದನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಇದು ಜನರಲ್ಲಿ ನ್ಯಾಯಾಂಗದ ಮೇಲಿನ ವಿಶ್ವಾಸಾರ್ಹತೆಯನ್ನು ಕಡಿಮೆ ಮಾಡುತ್ತದೆ ಎಂದಿದೆ.


