ಚುನಾವಣಾ ನಿಯಮಗಳಿಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯಸಭಾ ಸಂಸದ ಹಾಗೂ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಂಬಂಧ ಸುಪ್ರೀಂ ಕೋರ್ಟ್ ಇಂದು (ಜನವರಿ 15) ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದೆ.
1961ರ ಚುನಾವಣಾ ನಿಯಮದಲ್ಲಿ 93 (2)(ಎ) ಚುನಾವಣೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಮುಕ್ತವಾಗಿರುತ್ತವೆ ಎಂದು ಹೇಳಲಾಗಿತ್ತು. ಅದಕ್ಕೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರ, ಚುನಾವಣೆಗೆ ಸಂಬಂಧಿಸಿದಂತೆ ‘ನಿರ್ದಿಷ್ಟ’ ದಾಖಲೆ, ಕಡತಗಳು ಮಾತ್ರ ಸಾರ್ವಜನಿಕರ ತಪಾಸಣೆಗೆ ಲಭ್ಯವಿರುತ್ತವೆ ಎಂದು ಮಾಡಿದೆ.
ಸಿಸಿಟಿವಿ ಕ್ಯಾಮರಾ, ವೆಬ್‌ಕಾಸ್ಟಿಂಗ್ ದೃಶ್ಯಾವಳಿಗಳು ಮತ್ತು ಅಭ್ಯರ್ಥಿಗಳ ವಿಡಿಯೋ ರೆಕಾರ್ಡಿಂಗ್‌ಗಳಂತಹ ಎಲೆಕ್ಟ್ರಾನಿಕ್ ದಾಖಲೆಗಳನ್ನು ಸಾರ್ವಜನಿಕರ ತಪಾಸಣೆಯಿಂದ ಹೊರಗಿಡಲಾಗಿದೆ. ದುರುಪಯೋಗ ತಡೆಯಲು ಚುನಾವಣಾ ಆಯೋಗದ ಶಿಫಾರಸಿನ ಮೇರೆಗೆ ಈ ತಿದ್ದುಪಡಿಗಳನ್ನು ಮಾಡಲಾಗಿದೆ ಎಂದು ಕೇಂದ್ರ ಸಮರ್ಥಿಸಿಕೊಂಡಿದೆ.
ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ಪೀಠವು, ಕೇಂದ್ರ ಸರ್ಕಾರ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದ್ದು, ಪ್ರತಿಕ್ರಿಯೆ ಕೇಳಿದೆ ಎಂದು ವರದಿಯಾಗಿದೆ.
ಜೈರಾಮ್ ರಮೇಶ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, “ಮಾಧ್ಯಮಗಳಲ್ಲಿ ವರದಿಯಾದಂತೆ ಮತದಾರರ ಗುರುತು ಬಹಿರಂಗವಾಗದಂತೆ ನೋಡಿಕೊಳ್ಳಲು ನಿಯಮಗಳನ್ನು ತಿದ್ದುಪಡಿ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ. ಆದರೆ, ನಿಯಮಗಳು ತಿದ್ದುವ ಮೊದಲು ಮತದಾರರ ಗುರುತು ಬಹಿರಂಗವಾಗುತ್ತಿರಲಿಲ್ಲ ಎಂದು ಹೇಳಿದರು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಕೂಡ ವಾದ ಮಂಡಿಸಿದರು.
ನ್ಯಾಯಾಲಯ ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ನಿಗದಿ ಮಾಡಿದೆ.
ಲೈಂಗಿಕ ದೌರ್ಜನ್ಯ ಪ್ರಕರಣ | ಆಸಾರಾಮ್ ಬಾಪುಗೆ ಮಾರ್ಚ್ 31 ರವರೆಗೆ ಮಧ್ಯಂತರ ಜಾಮೀನು


