ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆ 2018ನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಈ ಪ್ರಕರಣದ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡುವ ಅವಕಾಶವನ್ನು ನ್ಯಾಯಾಲಯ ತಳ್ಳಿಹಾಕಿದೆ.
2018ರ ಮಾರ್ಚ್ 20ರಂದು ಸುಪ್ರೀಂಕೋರ್ಟ್‌ನ ವಿಭಾಗೀಯ ಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ಎ.ಕೆ. ಗೋಯಲ್ ಮತ್ತು ಯು.ಯು.ಲಲಿತ್ SC/ST ಸಮುದಾಯದವರ ಮೇಲೆ ದೌರ್ಜನ್ಯ ನಡೆದಾಗ ನೇಮಕಾತಿ ಪ್ರಾಧಿಕಾರದಿಂದ ಸೂಕ್ತ ಅನುಮತಿ ಇಲ್ಲದೆ ದೌರ್ಜನ್ಯ ನಡೆಸಿದ ಆರೋಪಿಗಳನ್ನು ಬಂಧಿಸುವಂತಿಲ್ಲ ಎಂದು ಆದೇಶ ನೀಡಿದ್ದರು.
ಅಂದರೆ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಸಾರ್ವಜನಿಕ ಸೇವಕನನ್ನು ಬಂಧಿಸುವ ಮೊದಲು ಪ್ರಾಥಮಿಕ ತನಿಖೆ ನಡೆಸಬೇಕು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಅನುಮತಿ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಹೇಳಿತ್ತು. ಅದನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಕೇಂದ್ರ ಸರ್ಕಾರ ಕಳೆದ ವರ್ಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ಕಾಯ್ದೆಗೆ ತಿದ್ದುಪಡಿ ತಂದಿತ್ತು. 2018ರ ಮಾರ್ಚ್ ತಿಂಗಳಲ್ಲಿ ಸುಪ್ರೀಂಕೋರ್ಟ್‌ನ ವಿಭಾಗೀಯ ಪೀಠ ಇದನ್ನು ಅಳಿಸಿಹಾಕಿತ್ತು. ಈ ತೀರ್ಪನ್ನು ತ್ರಿಸದಸ್ಯ ಪೀಠದ ಮುಂದೆ ಪ್ರಶ್ನಿಸಲಾಗಿತ್ತು.
ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಅರುಣ್ ಮಿಶ್ರಾ, ಎಂ.ಆರ್. ಶಾ ಮತ್ತು ಬಿ.ಆರ್. ಗವಾಯಿ ಅವರಿದ್ದ ಪೀಠ ಅಸಹಾಯಕರಿಗೆ ಈ ಕಾಯ್ದೆ ಅಗತ್ಯವಾಗಿದೆ ಎಂದು ಅರ್ಜಿಯನ್ನು ಮಾನ್ಯ ಮಾಡಿತ್ತು. ಜೊತೆಗೆ ಇದು ಸಾಕಷ್ಟು ವಿವಾದ ಏಳಲು ಕಾರಣವಾಗುತ್ತದೆ. ನಿಗದಿತ ಸಮಯದಲ್ಲಿ ತನಿಖೆ ನಡೆಸದಿದ್ದರೆ ವಿಚಾರಣೆಯನ್ನು ನಡೆಸಲು ಬರುವುದಿಲ್ಲ ಎಂದು ತಿಳಿಸಿತ್ತು.
ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ವಿನೀತ್ ಸರನಿ ಮತ್ತು ರವೀಂದ್ರ ಭಟ್ ಅವರಿದ್ದ ಪೀಠ ಪ್ರಕರಣದ ತೀರ್ಪು ಪ್ರಕಟಿಸಿದ್ದು ದಲಿತರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಗಳನ್ಜು ತಕ್ಷಣ ಬಂಧಿಸಬೇಕು. ನಿರೀಕ್ಷಣಾ ಜಾಮೀನು ನೀಡುವುದನ್ನು ನಿಷೇಧಿಸಬೇಕು. ಬಂಧಿಸುವ ವೇಳೆ ಪ್ರಾಥಮಿಕ ತನಿಖೆ ಅಗತ್ಯ. ಹಿರಿಯ ಪೊಲೀಸ್ ಅಧಿಕಾರಗಳ ಅನುಮತಿ ಬೇಕಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ.


