ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಗುರುವಾರವು ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ.
ರಾಜ್ಯದ ಚೆನ್ನೈ ಮತ್ತು ಹತ್ತಿರದ ಚೆಂಗೆಲ್‌ಪೇಟ್, ತಿರುವಳ್ಳೂರು, ಕಾಂಚೀಪುರಂ ಮತ್ತು ವಿಲ್ಲುಪುರಂ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ, ವಿಶೇಷವಾಗಿ ತಮಿಳುನಾಡಿನ ಉತ್ತರ ಜಿಲ್ಲೆಗಳಲ್ಲಿ ನಿಲ್ಲದೆ ಭಾರಿ ಪ್ರಮಾಣದಲ್ಲಿ ಸುರಿಯುತ್ತಿದೆ.
ಈ ನಡುವೆ ಚೆನ್ನೈನ ಟಿಪಿ ಛತ್ರಂ ಪ್ರದೇಶದ ಸ್ಮಶಾನದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಶ್ವರಿ ರಕ್ಷಿಸಿದ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ: ತಮಿಳುನಾಡಿನಲ್ಲಿ ಮುಂದುವರೆದ ಮಳೆ ಅಬ್ಬರ: ಚೆನ್ನೈ ಸೇರಿ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ವೀಡಿಯೊದಲ್ಲಿ, ಪೊಲೀಸ್ ಇನ್ಸ್‌ಪೆಕ್ಟರ್ ವ್ಯಕ್ತಿಯನ್ನು ತನ್ನ ಭುಜದ ಮೇಲೆ ಹೊತ್ತುಕೊಂಡು ಹೋಗಿ ಆಟೋದಲ್ಲಿ ಮಲಗಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಶ್ವರಿ ಅವರ ನಿಸ್ವಾರ್ಥ ಕಾರ್ಯಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.
28 ವರ್ಷದ ವ್ಯಕ್ತಿ ಸ್ಮಶಾನದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಎಗ್ಮೋರ್ ಮತ್ತು ಪೆರಂಬೂರ್‌ನಂತಹ ಸ್ಥಳಗಳಲ್ಲಿ ಮರಗಳು ಉರುಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಗುರುವಾರ ಸಂಜೆ ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ನಡುವಿನ ಕರಾವಳಿಯನ್ನು ದಾಟಲಿದ್ದು, ಚೆನ್ನೈ ಮತ್ತು ಅದರ ಉಪನಗರಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ವರದಿಯಾಗಿತ್ತು.
ಇದನ್ನೂ ಓದಿ: ನೆರೆ ನೀರಿನಲ್ಲಿ ಫೋಟೋ ಶೂಟ್ ನಡೆಸಿ ನಟನೆ ಮಾಡಿದ ಅಣ್ಣಾಮಲೈ – ‘ಕೋಡಂಗಿ’ ಎಂದ ತಮಿಳರು


