ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಶಾಲೆಯೊಂದರಲ್ಲಿ ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ. ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆ ಹಾಗೂ ಶಾಲೆ ಪರವಾನಗಿ ರದ್ದುಪಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿ ಗುಂಪು, ಪೋಷಕರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾಮರೆಡ್ಡಿ ಪೊಲೀಸ್ ವರಿಷ್ಠಾಧಿಕಾರಿ ಸಿಂಧು ಶರ್ಮಾ ಪ್ರಕಾರ, ಜೀವಧನ್ ಶಾಲೆಯಲ್ಲಿ ಆಪಾದಿತ ಹಲ್ಲೆಯ ಬಗ್ಗೆ ಸೋಮವಾರ ದೂರು ಸ್ವೀಕರಿಸಲಾಗಿದೆ. ದೂರಿನ ಆಧಾರದ ಮೇಲೆ ಪೋಕ್ಸೋ ಕಾಯಿದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ನಾಗರಾಜನನ್ನು ಕಸ್ಟಡಿಗೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಪೋಷಕರ ಗುಂಪು ಹಾಗೂ ವಿದ್ಯಾರ್ಥಿ ಸಂಘದ ಮುಖಂಡರು ಸೇರಿದಂತೆ ಪ್ರತಿಭಟನಾಕಾರರು ಮಂಗಳವಾರ ಶಾಲೆಯ ಆವರಣಕ್ಕೆ ನುಗ್ಗಲು ಪ್ರಯತ್ನಿಸಿದರು.
ಘಟನಾ ಸ್ಥಳಕ್ಕೆ ಆಗಮಿಸಿದ ಉನ್ನತ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರಾದರೂ, ಶಾಂತಿ ಕಾಪಾಡುವ ಪ್ರಯತ್ನ ವಿಫಲವಾಯಿತು. ಉದ್ರಿಕ್ತ ಪ್ರತಿಭಟನಾಕಾರರು ಶಾಲೆಯ ಮೇಲೆ ಕಲ್ಲು ತೂರಿದ್ದರಿಂದ ಅಧಿಕಾರಿಯೊಬ್ಬರು ಗಾಯಗೊಂಡರು.
ನಂತರ, ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿದ ಪ್ರತಿಭಟನಾಕಾರರು ಆರೋಪಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.
ಪ್ರತಿಭಟನೆಯ ಕುರಿತು ಪ್ರತಿಕ್ರಿಯಿಸಿದ ಎಸ್‌ಪಿ ಶರ್ಮಾ, ‘ಘಟನೆಯಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಹಿಂಸಾಚಾರವನ್ನು ಪ್ರಚೋದಿಸಿದ ಮತ್ತು ಶಾಲೆಯಲ್ಲಿ ವಿನಾಶವನ್ನು ಉಂಟುಮಾಡಿದ ವ್ಯಕ್ತಿಗಳನ್ನು ಗುರುತಿಸಲಾಗಿದೆ” ಎಂದು ಹೇಳಿದ್ದಾರೆ.
ಶಾಲೆಯ ಆಸ್ತಿ ಧ್ವಂಸ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಹೆಚ್ಚುವರಿಯಾಗಿ, ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಹರಡಿದ ಇತರ ಇಬ್ಬರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.
ಇದನ್ನೂ ಓದಿ; ‘ನನ್ನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ..’; ಬಿಜೆಪಿ ವಾಗ್ದಂಡನೆ ಬಳಿಕ ಯೂ-ಟರ್ನ್ ಹೊಡೆದ ಬಿಜೆಪಿ ಸಂಸದೆ ಕಂಗನಾ


