Homeಮುಖಪುಟಉಕ್ರೇನ್‌ನಲ್ಲಿನ ಭಾರತೀಯ ವಿದ್ಯಾರ್ಥಿಗಳ ಸ್ಥಿತಿಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

ಉಕ್ರೇನ್‌ನಲ್ಲಿನ ಭಾರತೀಯ ವಿದ್ಯಾರ್ಥಿಗಳ ಸ್ಥಿತಿಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

- Advertisement -
- Advertisement -

ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡುತ್ತಿರುವ ಸಂದರ್ಭದಲ್ಲಿ ಉಕ್ರೇನ್‌ನಲ್ಲಿ ಹಲವು ಭಾರತೀಯ ವಿದ್ಯಾರ್ಥಿಗಳು ಸಿಕ್ಕಿಕೊಂಡಿದ್ದಾರೆ. ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬ ಸಾವನಪ್ಪಿದ್ದಾನೆ. ಈ ಎಲ್ಲಾ ಸಂದಿಗ್ದ ಪರಿಸ್ಥಿತಿಗೆ ಕೇಂದ್ರ ಬಿಜೆಪಿ ಸರ್ಕಾರದ ಅನಿಶ್ಚಿತ ಮತ್ತು ಬೇಜವಾಬ್ದಾರಿ ನೀತಿ-ನಿಲುವುಗಳೂ ಕಾರಣ ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕಳೆದ ಕೆಲವು ತಿಂಗಳಿಂದ ಯುಕ್ರೇನ್ – ರಷ್ಯಾ ನಡುವೆ ಯಾವುದೇ ಕ್ಷಣದಲ್ಲಿ ಯುದ್ಧ ಸ್ಪೋಟವಾಗಬಹುದೆಂಬ ವರದಿಗಳ ಹಿನ್ನೆಲೆಯಲ್ಲಿ ಹಲವಾರು ದೇಶಗಳು ತಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ವಾಪಸು ಕರೆಸಿಕೊಳ್ಳುವ ಪ್ರಯತ್ನ ಪ್ರಾರಂಭಿಸಿತ್ತು. ಆದರೆ ಭಾರತ ಮಾತ್ರ ಯುದ್ಧ ಶುರುವಾಗುವವರೆಗೆ ಭಾರತೀಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಮೋದಿಯವರು ಮುನ್ನೆಚ್ಚರಿಕೆ ವಹಿಸಲಿಲ್ಲ ಎಂದು ದೂರಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರದ ಈ ನಿರ್ಲಕ್ಷ್ಯದಿಂದಾಗಿಯೇ ಕರ್ನಾಟಕದ ಯುವ ವಿದ್ಯಾರ್ಥಿ ನವೀನ್ ಪ್ರಾಣ ಕಳೆದುಕೊಂಡು, ಆತನ ಹೆತ್ತವರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಆ ವಿದ್ಯಾರ್ಥಿಯ ಸಹಪಾಠಿಗಳು ಮತ್ತು ಹೆತ್ತವರ ಹೇಳಿಕೆಗಳೇ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿವೆ ಪ್ರಧಾನಿ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರು ಸಕಾಲದಲ್ಲಿ ಈ ವಿದ್ಯಾರ್ಥಿಗಳ ನೆರವಿಗೆ ಧಾವಿಸಿ, ಅವರನ್ನು ಭಾರತಕ್ಕೆ ಕರೆತಂದಿದ್ದರೆ ಅಮೂಲ್ಯವಾದ ಜೀವವೊಂದು ಉಳಿಯುತ್ತಿತ್ತು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಮ್ಮೊಳಗಿನ ರಾಜಕೀಯ ಭಿನ್ನಾಭಿಪ್ರಾಯಗಳು, ಸೈದ್ಧಾಂತಿಕ ವ್ಯತ್ಯಾಸಗಳು ಏನೇ ಇದ್ದರೂ ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಬಿಜೆಪಿ ಸರ್ಕಾರ ಕೈಗೊಳ್ಳುವ ನಿರ್ಧಾರವನ್ನು ಬೆಂಬಲಿಸುವುದು ನಮ್ಮ ಕರ್ತವ್ಯವಾಗಿದೆ. ಆದರೆ ಯುಕ್ರೇನ್‌ನ ಬಹಳಷ್ಟು ಪ್ರದೇಶಗಳಲ್ಲಿ ಆ ದೇಶದ ಜನ ಮತ್ತು ಸೈನಿಕರು ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ-ದೌರ್ಜನ್ಯಗಳನ್ನು ನಡೆಸುತ್ತಿರುವುದು ಮಾತ್ರವಲ್ಲ, ಅಪಹರಿಸಿಕೊಂಡು ಹೋಗಿರುವ ಘಟನೆಗಳು ಕೂಡಾ ವರದಿಯಾಗಿವೆ. ಇದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಯುದ್ಧಗ್ರಸ್ತ ದೇಶದಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚಾರಣೆ ಭಾರತಕ್ಕೆ ಹೊಸದೇನಲ್ಲ. ಹಿಂದೆಯೂ ಗಲ್ಪ್ ಯುದ್ಧ ನಡೆಯುತ್ತಿದ್ದಾಗ ಸುಮಾರು ಒಂದೂವರೆ ಲಕ್ಷ ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿತ್ತು. ಲಿಬಿಯಾದ ಯುದ್ಧದ ಸಮಯದಲ್ಲಿ ಸುಮಾರು 15,000 ಮತ್ತು ಯೆಮನ್ ಯುದ್ಧ ಕಾಲದಲ್ಲಿ ಅಂದಾಜು 5000 ಭಾರತೀಯರನ್ನು ಆಗಿನ ಕಾಂಗ್ರೆಸ್ ಸರ್ಕಾರ ಭಾರತಕ್ಕೆ ಕರೆತಂದಿತ್ತು. ಕಾಂಗ್ರೆಸ್ ಸರ್ಕಾರ ಇಲ್ಲವೇ ಕಾಂಗ್ರೆಸ್ ಪಕ್ಷ ಆ ಕಾರ್ಯಾಚರಣೆ ಬಗ್ಗೆ ಮೋದಿ
ಸರ್ಕಾರದಂತೆ ಪ್ರಚಾರ ಮಾಡಿ, ರಾಜಕೀಯವಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡಿರಲಿಲ್ಲ. ಆದರೆ ಮೋದಿ ಕೇಂದ್ರ ಸರ್ಕಾರ ಯುಕ್ರೇನ್ ನಿಂದ ಭಾರತೀಯರನ್ನು ಕರೆತರುವ ಕಾರ್ಯಚಾರಣೆಗೂ ಗಂಗಾ ನದಿಯ ಹೆಸರು ಕೊಟ್ಟು ಅದನ್ನು ಉತ್ತರ ಪ್ರದೇಶದ ಚುನಾವಣೆಯ ಪ್ರಚಾರದಲ್ಲಿ ಬಳಸಲು ಹೊರಟಿದೆ. ಇದು ಭಾರತೀಯ ಜನತಾ ಪಕ್ಷದ ಕ್ಷುಲ್ಲಕ ರಾಜಕೀಯದ ದುರ್ಬುದ್ಧಿಗೆ ಸಾಕ್ಷಿ ಎಂದಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕವಿಟ್ಟುಕೊಂಡು ಯುಕ್ರೇನ್ ನಲ್ಲಿ ಸಂಕಷ್ಟದಲ್ಲಿರುವ ಭಾರತೀಯರನ್ನು ವಾಪಸು ಕರೆತರುವ ಪ್ರಯತ್ನವನ್ನು ಮಾಡಬೇಕು. ಇದೇ ವೇಳೆ ಬಿಜೆಪಿ
ಸರ್ಕಾರ ಯುಕ್ರೇನ್ ಮತ್ತು ರಷ್ಯಾ ದೇಶಗಳ ಜೊತೆ ಮಾತುಕತೆ ನಡೆಸಿ ಭಾರತೀಯರ ಸುರಕ್ಷತೆಯನ್ನು ಖಾತರಿಪಡಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಸರ್ಕಾರಿ ವೈದ್ಯಕೀಯ ಸೀಟಿಗೂ ನಿಗಧಿಗಿಂತ ನಾಲ್ಕು ಪಟ್ಟು ಅಧಿಕ ಶುಲ್ಕ ವಸೂಲಿ ಮಾಡುತ್ತಿರುವ KLE ಕಾಲೇಜು: ದೂರು ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...