Homeಕರ್ನಾಟಕಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

- Advertisement -
- Advertisement -

ಹುತಾತ್ಮ ಯೋಧ ಪ್ರಾಂಜಲ್ ಅವರ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯನ್ನು ಅರ್ಧ ಹಂಚಿ ತಪ್ಪು ಅರ್ಥ ಬರುವಂತೆ ಸಂಸದ ತೇಜಸ್ವಿ ಸೂರ್ಯ ಬಿಂಬಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದ, ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂದಿದೆ. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲು ಬದ್ಧವಾಗಿರುವುದನ್ನು ತಿಳಿಸಿದ್ದು ಮಾತ್ರವಲ್ಲ, ಬೇರೆ ಯಾವ ರಾಜ್ಯದಲ್ಲಿಯಾದರೂ ಹುತಾತ್ಮ ಯೋಧರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದರೆ ಅಷ್ಟೇ ಮೊತ್ತವನ್ನು ನೀಡಲು ಸಿದ್ಧ ಎಂದೂ ತಿಳಿಸಿದ್ದೇನೆ. ಇಂದು ನಮ್ಮ ಅಧಿಕಾರಿಗಳು ಪರಿಹಾರದ ಚೆಕ್‌ನ್ನು ಹುತಾತ್ಮ ಪ್ರಾಂಜಲ ಅವರ ಕುಟುಂಬಕ್ಕೆ ನೀಡಿದ್ದಾರೆ. ಪತ್ರಕರ್ತರ ಮುಂದೆ ನಾನು ನೀಡಿರುವ ಹೇಳಿಕೆ ಪೂರ್ಣ ವಿಡಿಯೋವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು  ತೇಜಸ್ವಿ ಸೂರ್ಯ ಅವರು ಹುತಾತ್ಮ ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಈ ಸಂಸದನಲ್ಲಿ ಕಿಂಚಿತ್ತು ಮಾನ-ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ. ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಹುತಾತ್ಮ ಪ್ರಾಂಜಲ್ ಅವರ ಮೃತದೇಹವನ್ನು ಇಲ್ಲಿಗೆ ತಂದಿದ್ದ ದಿನ ಪ್ರಧಾನಿ ನರೇಂದ್ರಮೋದಿ ಅವರು ಬೆಂಗಳೂರಿನಲ್ಲಿಯೇ ಇದ್ದರೂ ಅಂತಿಮ ದರ್ಶನ ಮಾಡಿ ಹೆತ್ತವರಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಇದನ್ನು ನಾವು ವಿವಾದ ಮಾಡಲು ಹೋಗಲಿಲ್ಲ. ಆದರೆ ಸಂಸದ ಒಬ್ಬ ವೀರ ಯೋಧನ ಬಲಿದಾನವನ್ನು ಕೂಡಾ ತನ್ನ ಸುಳ್ಳು ಸುದ್ದಿಯ ಫ್ಯಾಕ್ಟರಿಗೆ ಸರಕಾಗಿ ಮಾಡಿ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಕ್ಯಾ. ಪ್ರಾಂಜಲ್‌ ಕುರಿತ ಸಿದ್ದರಾಮಯ್ಯ ಅವರ ಹೇಳಿಕೆಯ ಅರ್ಧ ಭಾಗವನ್ನು ಮಾತ್ರ ಸಂಸದ ತೇಜಸ್ವಿ ಸೂರ್ಯ ಹಂಚಿಕೊಂಡಿದ್ದರು. ಅದರಲ್ಲಿ ಸಿದ್ದರಾಮಯ್ಯ ಅವರು ಕ್ಯಾ. ಪ್ರಾಂಜಲ್‌ ಯಾರು? ಯಾವಾಗ ಪರಿಹಾರ ನೀಡುತ್ತೇವೆ ಎಂದು ಘೋಷಿಸಿದ್ವಿ? ಎಂದು ಪ್ರಶ್ನಿಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ ವಾಸ್ತವವಾಗಿ ಸಿದ್ದರಾಮಯ್ಯ ಅವರಿಗೆ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿಸಿರಲಿಲ್ಲ. ಆ ಬಳಿಕ ಅವರು ಪರಿಹಾರ ನೀಡುವ ಬಗ್ಗೆ ಸ್ಪಷ್ಟಪಡಿಸಿದ್ದರು. ಆ ಕುರಿತ ಸಂಪೂರ್ಣ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ ಅವರೇ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -