Homeಕರ್ನಾಟಕಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸುವಂತಿಲ್ಲ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ

ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸುವಂತಿಲ್ಲ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ

- Advertisement -
- Advertisement -

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೈಯ್ಯಲ್ಲಿ ಶೌಚಾಲಯ ಸ್ವಚ್ಛತೆ ಮತ್ತು ಶೌಚಗುಂಡಿಯ ಸ್ವಚ್ಛತೆ ಮಾಡಿಸುತ್ತಿರುವ ಘಟನೆ ಒಂದರ ಹಿಂದೆ ಒಂದರಂತೆ ಬೆಳಕಿಗೆ ಬರುತ್ತಿರುವ ಹಿನ್ನೆಲೆ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ಮಾಡಿಸದಂತೆ ಸುತ್ತೋಲೆ ಹೊರಡಿಸಿದೆ.

ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ.ಕಾವೇರಿ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯ ಸ್ವಚ್ಛತೆಗೆ ಬಳಸಿಕೊಂಡಲ್ಲಿ ಎಫ್‍ಐಆರ್ ದಾಖಲಿಸುವುದಾಗಿ ಹೇಳಿದ್ದಾರೆ.

ಇಲಾಖೆಯಿಂದ ಹೊರಡಿಸಲಾಗುವ ಸೂಚನೆ, ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು.  ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುವಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಎಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳಲ್ಲಿ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಂತಹ ಕಾರ್ಯಗಳಿಂದ ದೂರವಿರಿಸುವುದು ಅಧಿಕಾರಿಗಳ, ಮುಖ್ಯ ಶಿಕ್ಷಕರ, ಸಿಬ್ಬಂದಿಯ ಕರ್ತವ್ಯ. ಸರ್ಕಾರಿ ಮಾತ್ರವಲ್ಲದೆ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಸಹ ಇಂತಹ ಯಾವುದೇ ಪ್ರಕರಣಗಳು ನಡೆಯಬಾರದು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

ಶಾಲೆಗೆ ನೀಡುತ್ತಿರುವ ಅನುದಾನವನ್ನು ಪ್ರಥಮ ಪ್ರಾಶಸ್ತ್ರದಲ್ಲಿ ಶೌಚಾಲಯಗಳ ಸ್ವಚ್ಛತಾ ಕಾರ್ಯಗಳಿಗೆ ಬಳಸಿಕೊಂಡು ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್‌ಡಿಎಂಸಿ) ಸಹಕಾರದೊಂದಿಗೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಶೌಚಾಲಯಗಳ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು .ಶಾಲೆಗಳಿಗೆ ಕಾಲ-ಕಾಲಕ್ಕೆ ಖುದ್ದು ಭೇಟಿ ನೀಡಿ ಶಾಲೆಗಳಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕವಾದ ಬಳಕೆಗೆ ಯೋಗ್ಯವಾದ ಶೌಚಾಲಯಗಳು ಲಭ್ಯವಿರುವುದನ್ನು ಪರಿಶೀಲಿಸಬೇಕು. ಶಾಲಾ ಅವಧಿಯಲ್ಲಿ  ಶೌಚಾಲಯಗಳಿಗೆ ಬೀಗ ಹಾಕದೆ ವಿದ್ಯಾರ್ಥಿಗಳ ಉಪಯೋಗಕ್ಕೆ ಅವಕಾಶ ಕಲ್ಪಿಸಿರುವುದನ್ನು ಖುದ್ದಾಗಿ ಪರಿಶೀಲಿಸಿ ಖಚಿತಪಡಿಸಿಕೊಳ್ಳಿ ಎಂದು ಶಾಲಾ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೂ ಕೂಡ ಸೂಚಿಸಲಾಗಿದೆ.

ಶಾಲೆಯಲ್ಲಿ ಪರಿಶೀಲನೆ ವೇಳೆ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ಬಳಸಿಕೊಂಡಿರುವುದು ಗಮನಕ್ಕೆ ಬಂದಲ್ಲಿ ತಕ್ಷಣವೇ ಕ್ರಮವಹಿಸಲು ಅನುವಾಗುವಂತೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಉಪನಿರ್ದೇಶಕರಿಗೆ(ಆಡಳಿತ) ತಕ್ಷಣ ವರದಿ ಮಾಡಲು ಶಾಲಾ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಿಳಿಸಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಮಕ್ಕಳನ್ನು ಶೌಚಗುಂಡಿಗೆ ಇಳಿಸಿದ ಪ್ರಕರಣ ಬೆಳಕಿಗೆ ಬಂದಿತ್ತು.  ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದರು.

ಇದರ ಬೆನ್ನಲ್ಲೆ ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದ್ರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳ ಕೈಯಿಂದಲೇ ಶಿಕ್ಷಕರು ಶೌಚಾಲಯ ಕ್ಲೀನ್ ಮಾಡಿಸಿಕೊಂಡಿರುವ ಘಟನೆ ಬಯಲಾಗಿತ್ತು. ಕಲಿಯುವುದಕ್ಕೆಂದು ಶಾಲೆಗೆ ಬರುವ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವುದು ಹೇಯ ಕೃತ್ಯ ಎಂದು ಸಾರ್ವಜನಿಕರು ಶಾಲಾ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇದಾದ ಬಳಿಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದ ಭದ್ರಾವತಿಯ ನೇರಲೆಕೆರೆ ಶಾಲೆಯಲ್ಲಿ ಮಕ್ಕಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹರಡಿತ್ತು. ವಿಡಿಯೋ ನೋಡಿ ಆಕ್ರೋಶಗೊಂಡ ಪೋಷಕರು ಪ್ರತಿಭಟನೆ ನಡೆಸಿದ್ದರು. ಇದೀಗ ಒಂದರ ಹಿಂದೆ ಒಂದರಂತೆ ಘಟನೆಗಳು ಬಯಲಾಗುತ್ತಿದ್ದಂತೆ ರಾಜ್ಯ ಸರಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸುತ್ತೋಲೆ ಹೊರಡಿಸಿದೆ.

ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ:

ಈ ಮೊದಲು ಮಾತನಾಡಿದ್ದ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರಸ್ತುತ ವರ್ಷದಿಂದ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡಲಾಗುವುದು. ಅದನ್ನು ಶೌಚಾಲಯದ ಶುಚಿತ್ವ ಹಾಗೂ ನಿರ್ವಹಣೆಗೆ ಬಳಸಬೇಕೆಂದು ಶೀಘ್ರ ಆದೇಶ ಹೊರಡಿಸಲಾಗುವುದು. ಶಾಲೆಗಳಲ್ಲಿ ಮಕ್ಕಳು ಶೌಚಾಲಯ ಶುಚಿಗೊಳಿಸುವುದನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಇದರ ನಿಯಂತ್ರಣಕ್ಕೆ ಶಾಲಾಭಿವೃದ್ಧಿ ಸಮಿತಿ ಮತ್ತು ಶಾಲೆ ಜಂಟಿಯಾಗಿ ಕಾರ್ಯನಿರ್ವಹಿಸಲು ಹೊಸ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದರು.

ಇದನ್ನು ಓದಿ: ಮರಗಳ್ಳತನ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರನ ಬಂಧನ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...