ರಾಜ್ಯ ಸರ್ಕಾರ ರಚಿಸಿರುವ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ ಸರ್ಕಾರ ವಿರುದ್ಧ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದಕ್ಕೆ ಎಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗಿದೆ. ಕನ್ನಡಪರ ಸಂಘಟನೆಗಳು ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನದ ವಿರುದ್ಧ ರಾಜ್ಯದ್ಯಂತ ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿವೆ.
ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಟಿ.ಎ.ನಾರಾಯಣ ಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು, ಕನ್ನಡಪರ ಹೋರಾಟಗಾರರನ್ನು ಅವಮಾನಿಸಿ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಘೋಷಣೆ ಕೂಗಿದರು.
ಮರಾಠ ಅಭಿವೃದ್ಧಿ ಪ್ರಾಧಿಕಾರ ವಾಪಸ್ ಪಡೆಯಬೇಕು. ಕನ್ನಡ ವಿರೋಧಿ ನೀತಿಗೆ ಧಿಕ್ಕಾರ, ರಾಜ್ಯ ಸರ್ಕಾರ ಕನ್ನಡಿಗರನ್ನು ಕಡೆಗಣಿಸಿದೆ. ಇಲ್ಲಿನ ಸಮಸ್ಯೆಗಳ ಬಗ್ಗೆ ಕುರುಡಾಗಿದೆ. ಬಡಬಗ್ಗರನ್ನು ನಿರ್ಲಕ್ಷಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಹಿಂಪಡೆಯದಿದ್ದರೆ ಹೋರಾಟವನ್ನು ತಾಲೂಕು ಕೇಂದ್ರಗಳಿಗೂ ವಿಸ್ತರಿಸಲಾಗುವುದು ಎಂದು ಹೇಳಿದರು.
ಕರವೇ ಮುಖಂಡರು ಮಾತನಾಡಿ, ರಾಜ್ಯ ಸರ್ಕಾರ ಮರಾಠರ ಅಭಿವೃದ್ಧಿ ಪ್ರಾಧಿಕಾರಕ್ಕೆ ಕನ್ನಡಿಗರ ತೆರಿಗೆ ಹಣವನ್ನು ನೀಡಿದೆ. ಕನ್ನಡದ ಸಂಸ್ಥೆಗಳಿಗೆ ಅನುದಾನವನ್ನು ನೀಡದೆ ನಿರ್ಲಕ್ಷ್ಯ ತೋರುತ್ತಿದೆ. ನಮ್ಮ ರಾಜ್ಯದ ಬಡಬಗ್ಗರ ಬಗ್ಗೆ ಕೊಡಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಆದರೆ ಮರಾಠರಿಗೆ ಕೊಡಲು ಹಣವಿದೆ ಎಂದು ಕಿಡಿಕಾರಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಕನ್ನಡಿಗರನ್ನು ಶೋಷಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ಶಾಲಾ ಮಕ್ಕಳಿಗೆ ನೀಡುತ್ತಿದ್ದ ಹಾಲು, ಹಣ್ಣು ಮತ್ತು ಮೊಟ್ಟೆಯನ್ನು ವಿತರಣೆ ಮಾಡುತ್ತಿಲ್ಲ. ಸೈಕಲ್ ವಿತರಣೆಯನ್ನೂ ಮಾಡುತ್ತಿಲ್ಲ. ಇದಕ್ಕೆ ಹಣ ಇಲ್ಲವೆಂದು ಹೇಳುವ ಸರ್ಕಾರ ಮರಾಠ ಅಬಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ನೀಡುತ್ತಿದೆ. ಈ ತಾರತಮ್ಯ ಸಲ್ಲದು. ಇದೇ ಧೋರಣೆ ಮುಂದುವರಿಸಿದರೆ ಉಗ್ರ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ


