ಉತ್ತರ ಪ್ರದೇಶದ ಪಿಲ್‌ಭಿತ್‌ನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ದಲಿತ ಬಾಲಕಿಗೆ ಚೆಂಕಿ ಹಚ್ಚಿರುವ ಘಟನೆ ನಡೆದಿದೆ. ಬೆಂಕಿಗೆ ಆಹುತಿಯಾದ ಬಳಿಕ ಜೀವನ್ಮರಣ ಹೋರಾಟ ನಡೆಸುತ್ತಿದ್ದ 16 ವರ್ಷದ ದಲಿತ ಬಾಲಕಿ ಕೊನೆಯುಸಿರೆಳೆದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಪರಿಸ್ಥಿತಿ ಗಂಭೀರವಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ಆರೋಪಿಗಳು ಮೊದಲು ಬಾಲಕಿಯ ಮೇಲೆ ಅತ್ಯಾಚಾರವೆಸಗಿದರು. ನಂತರ ಡೀಸೆಲ್ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನಿಸಿದರು” ಎಂದು ವಿವರಿಸಿದ್ದಾರೆ.
ಜಿಲ್ಲೆಯ ಮಾಧವ್ ತಾಂಡಾ ಪ್ರದೇಶದಲ್ಲಿ ಸೆಪ್ಟೆಂಬರ್ 7 ರಂದು ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸಂತ್ರಸ್ತೆ ತನಗಾದ ಸಂಕಷ್ಟವನ್ನು ವಿವರಿಸುತ್ತಿರುವ ವಿಡಿಯೋ ಶನಿವಾರ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಬಾಲಕಿಯನ್ನು ಸೆಪ್ಟೆಂಬರ್ 7ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪೊಲೀಸರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬಾಲಕಿಯ ಕುಟುಂಬದವರ ದೂರಿನ ಮೇರೆಗೆ ಶನಿವಾರ ರಾತ್ರಿ ಇಬ್ಬರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ, ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಸದರ್) ಯೋಗೇಶ್ ಕುಮಾರ್ ಅವರು ಅಪ್ರಾಪ್ತ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.


