ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ಅವ್ಯವಹಾರ ನಡೆದ ಆರೋಪ ಕೇಳಿ ಬಂದಿರುವ ಹಿನ್ನೆಲೆ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.
ಇಂದು ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನನ್ನ ಮೇಲೆ ಯಾರೂ ಒತ್ತಡ ಹಾಕಿಲ್ಲ. ನನ್ನ ಆತ್ಮ ಸಾಕ್ಷಿಯಾಗಿ, ಸ್ವ ಇಚ್ಚೆಯಿಂದ ರಾಜೀನಾಮೆ ನೀಡಲು ಮುಂದಾಗಿದ್ದೇನೆ. ಸಂಜೆ 7:30ಕ್ಕೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಪಕ್ಷ, ಸರ್ಕಾರಕ್ಕೆ ಮುಜುರಗ ಆಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಎಸ್‌ಐಟಿ ನಿಷ್ಪಕ್ಷಪಾತವಾಗಿ ಪ್ರಕರಣದ ತನಿಖೆ ನಡೆಸುತ್ತಿದೆ. ನಾನು ಮಂತ್ರಿ ಸ್ಥಾನದಲ್ಲಿದ್ದರೆ ತನಿಖೆಗೆ ತೊಂದರೆಯಾಗಬಹುದು. ಹಾಗಾಗಿ, ಈಗ ರಾಜೀನಾಮೆ ನೀಡಿ ಆರೋಪ ಮುಕ್ತನಾದ ಬಳಿಕ ಸಚಿವ ಸ್ಥಾನಕ್ಕೆ ಮರಳುತ್ತೇನೆ ಎಂದಿದ್ದಾರೆ.
“ಆತ್ಮಹತ್ಯೆ ಮಾಡಿಕೊಂಡಿರುವ ನಿಗಮದ ಅಧೀಕ್ಷರಾಗಿದ್ದ ಚಂದ್ರಶೇಖರನ್ ಅವರ ಡೆತ್ ನೋಟ್‌ನಲ್ಲಿ ನಿಮ್ಮ ಹೆಸರಿದೆ ಎಂದು ಹೇಳಲಾಗ್ತಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ನಾಗೇಂದ್ರ, ಇಲ್ಲ ನನ್ನ ಹೆಸರು ಉಲ್ಲೇಖಿಸಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ನನ್ನ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ವಿಧಾನಪರಿಷತ್ ಚುನಾವಣೆ: ಮೂರು ಪಕ್ಷಗಳಿಂದ 11 ಮಂದಿ ಅವಿರೋಧ ಆಯ್ಕೆ


