Homeಕರ್ನಾಟಕಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ...

ಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಸವರ್ಣೀಯರು

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ.

- Advertisement -
- Advertisement -

ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಇದೀಗ ಇಂತಹ ಅಮಾನುಷ ಘಟನೆಗೆ ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯೇ ಸಾಕ್ಷಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಜಾತಿನಿಂದನೆ, ಹಲ್ಲೆ ವಿರುದ್ದ ದೂರು ನೀಡಿದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಸವರ್ಣೀಯರು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಸದ್ಯ 25 ಜನರ ವಿರುದ್ಧ ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ

ಮಾರ್ಚ್ 3ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಮಾದಿಗ ಸಮುದಾಯದ ಹೆಮ್ಮವ್ವ ಮಲ್ಲಾಡದ ಹಾಗೂ ಅವರ ಪುತ್ರ ರಮೇಶ ಮಲ್ಲಾಡದ ಪ್ರವೇಶಿಸಲು ಯತ್ನಿಸಿದಾಗ ಕುಪಿತಗೊಂಡ 30-40 ಸವರ್ಣೀಯ ಸಮುದಾಯದ ಗ್ರಾಮಸ್ಥರ ಗುಂಪು ಹೆಮ್ಮವ್ವನ ಮನೆಗೆ ನುಗ್ಗಿ ದಾಳಿ ನಡೆಸಿದ್ದಾರೆ. ಮೇಲ್ಛಾವಣಿಯ ಹೆಂಚುಗಳನ್ನು ಒಡೆದು ಅವರ ಬೈಕನ್ನು ಹಾನಿಗೊಳಿಸಿದ್ದಾರೆ. ತಾಯಿ-ಮಗನ ಮೇಲೆ ಹಲ್ಲೆ ನಡೆಸಿದ್ದಾರೆ.

ಅಲ್ಲದೆ ಭಾನುವಾರ ಸಂಜೆ ದ್ಯಾಮವ್ವ ದೇವಿಯ ಗ್ರಾಮದ ಜಾತ್ರೆಯ ಅಂಗವಾಗಿ ದಲಿತ ಕಾಲೋನಿಯಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಅಲ್ಲಿದ್ದ ಕೆಲ ಮಕ್ಕಳು, ಯುವಕರು ಮೆರವಣಿಗೆಯ ಜತೆಗೆ ಕುಣಿದು ಕುಪ್ಪಳಿಸಲು ಮುಂದಾದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ದಲಿತರು ಮೆರವಣಿಗೆಯಲ್ಲಿ ಸೇರಬಾರದು ಎಂದು ತಾಕೀತು ಮಾಡಿದ್ದಾರೆ. ಜಾತಿನಿಂದನೆ ನಡೆಸಿ ರಮೇಶ್ ಮೇಲೆ ಮತ್ತೆ ಹಲ್ಲೆ ನಡೆಸಲಾಗಿದೆ. ಇದು ಎರಡೂ ಕಡೆಯಿಂದ ಜಗಳಕ್ಕೆ ಕಾರಣವಾಗಿದೆ. ಇದರಿಂದ ನೊಂದ ದಲಿತ ಕುಟುಂಬವು ಸ್ವಾಭಿಮಾನಿ ದಲಿತ ಶಕ್ತಿ ಸಂಘಟನೆಯ ನೆರವಿನೊಂದಿಗೆ ಪೊಲೀಸರು ದೂರು ನೀಡಿದೆ.

ಇದರಿಂದ ಸವರ್ಣೀಯರು ರೊಚ್ಚಿಗೆದ್ದು ಭಾನುವಾರ ರಾತ್ರಿ 12 ಗಂಟೆ ಸಮಯದಲ್ಲಿ ದೂರು ನೀಡಿದ ಕುಟುಂಬದ ಮನೆಗೆ ಬೆಂಕಿ ಹಚ್ಚಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಪ್ರಕಾರ, ಸುಮಾರು 30 ಗ್ರಾಮಸ್ಥರು ದಲಿತರ ಕಾಲೋನಿಗೆ ನುಗ್ಗಿ ಮನೆಗಳಿಗೆ ಮರದ ದಿಮ್ಮಿಗಳನ್ನು ಎಸೆದು ಪೆಟ್ರೋಲ್ ಸುರಿದಿದ್ದಾರೆ. ಅವರು ಮೊದಲ ಮನೆಗೆ ಬೆಂಕಿ ಹಚ್ಚಿದ್ದು, ಬೆಂಕಿಯು ಪಕ್ಕದ ಮನೆಗೂ ಹರಡಿದೆ. ನಂತರ ಅವರು ಓಡಿ ಹೋಗಿದ್ದಾರೆ. ಆದರೆ ಹೊಗೆಯಿಂದಾಗಿ ಕುಟುಂಬಸ್ಥರು ಮನೆಯಿಂದ ಹೊರಬಂದಿದ್ದಾರೆ. ಎರಡೂ ಮನೆಯಲ್ಲಿದ್ದ ಒಟ್ಟು 12 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆಗಳು ಸುಟ್ಟು ಹೋಗಿವೆ. ಇದೀಗ ಅವರೆಲ್ಲ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ವಾಸವಾಗಿದ್ದಾರೆ.

ಈ ಬಗ್ಗೆ ಸಂತ್ರಸ್ತೆ ಹೆಮ್ಮವ್ವ ಮಲ್ಲಾಡದ ಮಾತನಾಡಿದ್ದು, ”ದಶಕಗಳಿಂದ ದಲಿತ ಸಮುದಾಯಕ್ಕೆ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲ, ಆದರೆ ಅದು ನಮ್ಮ ಹಕ್ಕು ಎಂದು ದೇವಸ್ಥಾನ ಪ್ರವೇಶಿಸಿದೆವು. ಆದರೆ ಮೇಲ್ವರ್ಗದ ಗ್ರಾಮಸ್ಥರು ಮನೆಯ ಮೇಲ್ಛಾವಣಿಯ ಹೆಂಚು ಮತ್ತು ಬೈಕ್‌ಗೆ ಹಾನಿ ಮಾಡಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂತರ ಮನೆಗೆ ಬೆಂಕಿ ಹಚ್ಚಿದ್ದಾರೆ. ಗ್ರಾಮದ ದಲಿತರು ಗೌರವಯುತವಾಗಿ ಬದುಕಲು ರಕ್ಷಣೆ ನೀಡುವಂತೆ ಪೊಲೀಸರಿಗೆ ಒತ್ತಾಯಿಸಿದ್ದೇನೆ” ಎಂದು ಹೇಳಿದರು.

ಘಟನೆ ನಂತರ 30 ಸವರ್ಣೀಯ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನು ಬಾಹಿರ ಸಭೆ), 147 (ಗಲಭೆ), 148 (ಮಾರಕ ಆಯುಧದಿಂದ ಗಲಭೆ), 341(ತಪ್ಪಾದ ಸಂಯಮ), 451(ಅಪರಾಧ ಮಾಡಲು ಮನೆಗೆ ನುಗ್ಗುವುದು), 323(ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 354 (ದಾಳಿ) 504 (ಉದ್ದೇಶಪೂರ್ವಕ ಹಾನಿ) ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ. ಫೋನ್ ಕರೆ ಮತ್ತು ಮೆಸೇಜ್‌ಗಳ ಮೂಲಕ ಇಡೀ ಕುಟುಂಬವನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಸೂಕ್ತ ಕ್ರಮಕ್ಕೆ ಸಂಸದ ಎಲ್ ಹನುಮಂತಯ್ಯ ಆಗ್ರಹ

“ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿಯಲ್ಲಿ ಮಾದಿಗ ಸಮುದಾಯದ ಮೇಲೆ ನಡೆದಿರುವ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದೇನೆ. ಈ ಸಂಬಂಧ ಜಿಲ್ಲೆಯಲ್ಲಿ ನಡೆಯುತ್ತಿರುವ ಜಾತಿ ದೌರ್ಜನ್ಯಗಳ ಕುರಿತು ನಾಳೆ(ಮಾ.8) ಪೊಲೀಸ್‌ ಮಹಾ ನಿರ್ದೇಶಕ(ಡಿಜಿ)ರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಹಳ್ಳಿಗಳಲ್ಲಿ ದಲಿತ ಸಮುದಾಯ ಕನಿಷ್ಠ ಮಟ್ಟದ ಜೀವನ ನಡೆಸುವುದಕ್ಕೂ ಬಲಿಷ್ಠ ಸಮುದಾಯ ಅಡ್ಡಿಪಡಿಸುತ್ತಿರುವ ಪ್ರಕರಣಗಳು ರಾಜ್ಯಾದ್ಯಂತ ನಿರಂತರವಾಗಿ ನಡೆಯುತ್ತಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು” ಎಂದು ರಾಜ್ಯಸಭಾ ಸದಸ್ಯರಾದ ಎಲ್ ಹನುಮಂತಯ್ಯ ತಿಳಿಸಿದ್ದಾರೆ.

“ಗ್ರಾಮದಲ್ಲಿ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಸಶಸ್ತ್ರ ಮೀಸಲು (ಡಿಎಆರ್) ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಘಟನೆಯ ನಂತರ ಎಲ್ಲಾ ಆರೋಪಿಗಳು ತಲೆಮರೆಸಿಕೊಂಡಿದ್ದರು. ಈಗ ಇಬ್ಬರು ಶರಣಾಗಿದ್ದಾರೆ. ಅವರನ್ನು ವಿಚಾರಣೆ ನಡೆಸುತ್ತಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಈ ರೀತಿಯಾಗಿ ಸರಣಿ ದಲಿತ ದೌರ್ಜನ್ಯಗಳು ವರದಿಯಾಗಿದ್ದರೂ ಪೊಲೀಸರಾಗಲಿ, ಜಿಲ್ಲಾಡಳಿತವಾಗಿ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಹಾಗಾಗಿಯೇ ಆರೋಪಿಗಳು ಶನಿವಾರದಿಂದ ಮಂಗಳವಾರ ರಾತ್ರಿವರೆಗೂ ದೌರ್ಜನ್ಯದ ಮೇಲೆ ದೌರ್ಜನ್ಯ ನಡೆಸಿದ್ದಾರೆ. ದಲಿತರ ಸಹಾಯಕ್ಕೆ ಬಂದವರಿಗೂ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಿಎಂ ಆಗಲಿ, ಇತರ ಸ್ಥಳೀಯ ಮುಖಂಡರಾಗಲಿ ದನಿಯೆತ್ತಿಲ್ಲ. ಒಟ್ಟಾರೆಯಾಗಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜೀವಹಾನಿಗಳು ಸಂಭವಿಸುವ ಸಾಧ್ಯತೆಯಿದ್ದು ಹಾವೇರಿ ಜಿಲ್ಲಾಡಳಿತ ಕೂಡಲೇ ಎಚ್ಚೆತ್ತುಕೊಂಡು ತನಿಖೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕಿದೆ.

ಇದನ್ನೂ ಓದಿ; ‘ಬಿಬಿಸಿಯಲ್ಲಿ ಜಾತಿ ತಾರತಮ್ಯ ಅನುಭವಿಸಿದೆ’; ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ನೋವು ಹಂಚಿಕೊಂಡ ದಲಿತ ಪತ್ರಕರ್ತೆ ಮೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...