Homeಕರ್ನಾಟಕ‘ನೀವು ಹಿಟ್‌ ವಿಕೆಟ್‌ ಆಗಿದ್ದೀರಿ’ - ಸಿದ್ದರಾಮಯ್ಯ ಅವರಿಗೆ ಕುಮಾರಸ್ವಾಮಿ

‘ನೀವು ಹಿಟ್‌ ವಿಕೆಟ್‌ ಆಗಿದ್ದೀರಿ’ – ಸಿದ್ದರಾಮಯ್ಯ ಅವರಿಗೆ ಕುಮಾರಸ್ವಾಮಿ

ಲಸಿಕೆಯ ವಿಚಾರದಲ್ಲಿ ಬಿಜೆಪಿ ಸರ್ಕಾರ ರಾಜಕೀಯ ಮಾಡುವುದನ್ನು ವಿರೋಧ ಪಕ್ಷವಾಗಿ ನೀವ್ಯಾಕೆ ಪ್ರಶ್ನಿಸಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಕುಮಾರಸ್ವಾಮಿ ವಿರುದ್ದ ಪ್ರಶ್ನೆಗಳೆದ್ದಿವೆ.

- Advertisement -
- Advertisement -

ಶಾಂತಿ ಕಾಲದಲ್ಲಿ ಕಲಹಕ್ಕೆ ಬರುವುದು, ನೆರೆ ಮನೆ ಬೆಂಕಿಯಲ್ಲಿ ಬೇಳೆ ಬೇಯಿಸುವುದು ಕಾಂಗ್ರೆಸ್‌ನ ಜಾಡ್ಯ. ಈ ಅಂಟುರೋಗಕ್ಕೆ ಒಳಗಾದವರು ಸಿದ್ದರಾಮಯ್ಯ. ಲಸಿಕೆ ವಿಚಾರದಲ್ಲಿ ಕಾಂಗ್ರೆಸ್‌ನ ಆತ್ಮವಂಚನೆ ನೆನಪಿಸಿದ್ದಕ್ಕೆ ಸಿದ್ದರಾಮಯ್ಯ ನನ್ನ ವಿರುದ್ಧ ಕಾಲು ಕೆರೆದುಕೊಂಡು ಬಂದಿದ್ದಾರೆ. ಅವರ ಪ್ರತಿ ಎಸೆತಕ್ಕೆ ಸಿಕ್ಸರ್‌ ಕೊಡಬೇಕೆನಿಸಿದೆ ಎಂದು ಗುರುವಾರ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರು ಲಸಿಕೆ ವಿಚಾರವಾಗಿ ಬಿಜೆಪಿ ಹಾಗೂ ಕುಮಾರಸ್ವಾಮಿ ಅವರ ವಿರುದ್ದ ಬುಧವಾರ ಕಿಡಿಕಾರಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಇಂದು ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, “ಕೋವಿಡ್‌ ಲಸಿಕೆ ವಿಚಾರದಲ್ಲಿನ ಕಾಂಗ್ರೆಸ್‌ನ ಆತ್ಮವಂಚನೆಯನ್ನು ಪ್ರಸ್ತಾಪಿಸಿದ್ದಕ್ಕೆ ನಾನು ಸ್ವಯಂ ಗೋಲು ಹೊಡೆದುಕೊಂಡಿರುವುದಾಗಿ ನೀವು ಹೇಳಿದ್ದೀರಿ. ಸಿದ್ದರಾಮಯ್ಯನವರೇ ಲಸಿಕೆ ವಿಚಾರದಲ್ಲಿ ರಾಷ್ಟ್ರದ ಎದುರು ಬೆತ್ತಲಾಗಿ, ನಿಂತಿರುವುದು ಕಾಂಗ್ರೆಸ್‌. ಈ ವಿಚಾರದಲ್ಲಿ ನನ್ನನ್ನು ಟೀಕಿಸಲು ಬಂದು ನೀವು ಹಿಟ್‌ ವಿಕೆಟ್‌ ಆಗಿದ್ದೀರಿ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

“ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ. ಇದನ್ನೇ ಅಲ್ಲವೇ ನಾನು ಹೇಳಿದ್ದು?” ಎಂದು ಅವರು ಪ್ರಶ್ನಿಸಿದ್ದಾರೆ.

“ಕಾಂಗ್ರೆಸ್‌ನ ಲಸಿಕೆ ರಾಜಕಾರಣವನ್ನು ನಾನು ವಿವರಿಸಿದ್ದೇನೆ. ಕಾಂಗ್ರೆಸ್‌ನ ಅಪಪ್ರಚಾರದಿಂದ ಜನ ಲಸಿಕೆ ಹಾಕಿಸಿಕೊಳ್ಳುತ್ತಿಲ್ಲ ಎಂದು ನಾನು ಹೇಳಿಲ್ಲ. ಲಸಿಕೆಗಾಗಿ ಜನರು ಸಿದ್ದರಾಗಿಯೇ ಇದ್ದಾರೆ. ಕಾಂಗ್ರೆಸ್‌ ಹೇಳಿದ ಮಾತ್ರಕ್ಕೆ ಜನ ಲಸಿಕೆಯಿಂದ ವಿಮುಖರಾಗಿಲ್ಲ. ಜನ ಕಾಂಗ್ರೆಸ್‌ ಮಾತು ಕೇಳುತ್ತಾರೆ ಎಂಬ ಭ್ರಮೆ ಸಿದ್ದರಾಮಯ್ಯನವರಿಗೆ ಬೇಡ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಲಸಿಕೆಯೊಂದು ಸಿಕ್ಕಾಗ ಅದನ್ನು ಮೊದಲಿಗೆ ಮುಂಚೂಣಿ ಹೋರಾಟಗಾರರಿಗೆ ನೀಡಲಾಗುತ್ತದೆ. ಇದು ನಿಮಗೆ ತಿಳಿದಿರಲಿ. ದೇಶದಲ್ಲಿ ಮೊದಲು ಕೋವಿಡ್‌ ವಾರಿಯರ್‌ಗಳಿಗೆ ಲಸಿಕೆ ನೀಡಲಾಯಿತು. ನನ್ನ ಸರದಿ ಬಂದಾಗ ನಾನು ಲಸಿಕೆ ಪಡೆದೆ. ಇಲ್ಲಿ ಕಾಂಗ್ರೆಸ್‌ ಮಾತು ನಂಬಿ ಕೂರುವಂಥದ್ದೇನಿತ್ತು. ಕಾಂಗ್ರೆಸ್‌ ಮಾತನ್ನು 50 ವರ್ಷದಿಂದಲೂ ಕೇಳದ ಕುಟುಂಬ ನಮ್ಮದು!” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳದ ‘ಆರೋಗ್ಯ’ ಮತ್ತೆ ಮಹಿಳೆಯ ಕೈಗೇ!: ಟೀಚರ್ ಜಾಗಕ್ಕೆ ಪತ್ರಕರ್ತೆ!

“ದೇಶದಲ್ಲಿ ಸರ್ವರಿಗೂ ಉಚಿತ ಲಸಿಕೆ ಹಾಕುವಂತೆ ಸೋನಿಯಾ ಗಾಂಧಿ ಅವರ ಜೊತೆಗೂಡಿ ಎಚ್‌.ಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯನವರೇ, ದೇಶದ ಹಲವು ವಿರೋಧಪಕ್ಷಗಳ ನಾಯಕರ ಜೊತೆಗೂಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರೇ ಹೊರತು, ಸೋನಿಯಾ ಗಾಂಧಿ ಅವರ ಜೊತೆಗೂಡಿ ಪತ್ರ ಬರೆಯಲಿಲ್ಲ ನೆನಪಿರಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಷ್ಟಕ್ಕೂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಸಹಿ ಮಾಡುವಂತೆ ದೇವೇಗೌಡರಿಗೆ ಯಾರೆಲ್ಲ ವಿನಂತಿಸಿದ್ದರು, ಎಷ್ಟು ಬೇಡಾಡಿದರು ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಿದೆಯೇ? ದೆಹಲಿಗೆ ಹೋಗಿ ಈ ವಿಚಾರವಾಗಿ ಸಿದ್ದರಾಮಯ್ಯನವರು ಮಾಹಿತಿ ಪಡೆದು ಬರಲಿ. ಮಾಹಿತಿ ಇಲ್ಲದೇ ಮಾತಾಡುವುದು ಸಿದ್ದರಾಮಯ್ಯನವರಿಗಿರುವ ದೊಡ್ಡ ಸಮಸ್ಯೆ” ಎಂದು ಅವರು ಹೇಳಿದ್ದಾರೆ.

“ಅಸಮರ್ಪಕ ಲಸಿಕೆ ಅಭಿಯಾನ ವಿರುದ್ಧ ನಮ್ಮದೂ ಆಕ್ಷೇಪಣೆಗಳಿವೆ. ಆದರೆ, ಲಸಿಕೆ ವಿರುದ್ಧ ನಮ್ಮ ನಿಲುವು ಇಲ್ಲ. ಲಸಿಕೆ ಅಭಿಯಾನ ಸಮರ್ಪಕವಾಗಿ ನಡೆಯಬೇಕೆಂದು ಒತ್ತಾಯಿಸಿ ನಾನು ಸರ್ಕಾರಗಳಿಗೆ ಹಲವು ಸಲಹೆ ನೀಡಿದ್ದೇನೆ. ಆದರೆ, ಕಾಂಗ್ರೆಸ್‌ ಲಸಿಕೆ ವಿರುದ್ಧವೇ ಮಾತಾಡಿತು. ಈಗ ಲಸಿಕೆ, ಲಸಿಕೆ ಎನ್ನುತ್ತಿದೆ. ಇದು ಕಾಂಗ್ರೆಸ್‌ನ ಇಬ್ಬಗೆ ನೀತಿ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿಯದ್ದು ಬಾಲಿಷ ಹೇಳಿಕೆ: ಸಿದ್ದರಾಮಯ್ಯ

“ಸೋಂಕು ಹೆಚ್ಚುತ್ತಿದ್ದರೂ, ಲಾಕ್‌ಡೌನ್‌ ಜಾರಿಯಲ್ಲಿ ಇದ್ದರೂ ರಾಜ್ಯದಲ್ಲಿ ಕಾಂಗ್ರೆಸ್‌ ನಾಯಕರು ಬೀದಿಗೆ ಬಿದ್ದಿದ್ದಾರೆ. ಜನರಿಗೆ ನೆರವಾಗುವುದು ಇವರ ಉದ್ದೇಶವಲ್ಲ. ರಾಜಕೀಯ ಮೈಲೇಜ್‌ ಪಡೆಯುವುದು ಇವರ ಉದ್ದೇಶ. ಜೊತೆಗೆ ಸಿಎಂ ಆಗುವ ಕನಸುಗಳು. ಶಾಂತಿ ಕಾಲದಲ್ಲಿ ಕಾಂಗ್ರೆಸ್‌ ಕಲಹಕ್ಕೆ ಇಳಿದು ಲಾಭ ಪಡೆಯುತ್ತದೆ ಎಂಬುದಕ್ಕೆ ಇದು ಸಾಕ್ಷಿ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಲಸಿಕೆಗಾಗಿ ₹100 ಕೋಟಿ ಕೊಟ್ಟಿದ್ದಾಗಿ ಕಾಂಗ್ರೆಸ್‌ ಹೇಳುತ್ತಿದೆ. ಇದೇನು ಸಿದ್ದರಾಮಯ್ಯನವರ ಮನೆ ಗಂಟೇ? ಕಾಂಗ್ರೆಸ್‌ ಜನಪ್ರತಿನಿಧಿಗಳ ಕ್ಷೇತ್ರಾಭಿವೃದ್ಧಿ ನಿಧಿಯಲ್ಲವೇ? ಕ್ಷೇತ್ರಾಭಿವೃದ್ಧಿ ನಿಧಿಯನ್ನು ಸರ್ಕಾರಕ್ಕೇ ನೀಡಿರುವುದಾಗಿ ಹೇಳಬೇಕಿದ್ದ ಕಾಂಗ್ರೆಸ್‌, ಲಸಿಕೆಗಾಗಿ ಕೈಯಿಂದ 100 ಕೋಟಿ ಕೊಟ್ಟಂತೆ ಹೇಳಿದೆ. ಎಂಥ ವಂಚಕ ನಡೆ?” ಎಂದು ಅವರು ಹೇಳಿದ್ದಾರೆ.

ಕುಮಾರಸ್ವಾಮಿ ವಿರುದ್ದ ಸಾರ್ವಜನಿಕರ ಆಕ್ರೋಶ

ಕುಮಾರಸ್ವಾಮಿ ಅವರ ಈ ಹೇಳಿಕೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಕೊರೊನಾ ಲಸಿಕೆಯ ವಿಚಾರದಲ್ಲಿ ರಾಜಕೀಯ ಮಾಡಿದ್ದನ್ನು ಕಾಂಗ್ರೆಸ್‌ ಪ್ರಶ್ನಿಸಿದ್ದು ತಪ್ಪೆ ಎಂದು ಪ್ರಶ್ನಿಸಿದ್ದಾರೆ. ಲಸಿಕೆಯನ್ನು ಬೇಗನೆ ತಯಾರಿಸುವಂತೆ ಒತ್ತಾಯಿಸಿದ್ದು, ಕ್ಲಿನಿಕಲ್‌ ಟ್ರಯಲ್‌ಗೂ ಮುಂಚೆ ಅದಕ್ಕೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿದ್ದು ಸರಿಯಾದ್ದಲ್ಲವೆ, ಈ ವಿಚಾರದಲ್ಲಿ ವಿರೋಧ ಪಕ್ಷವಾಗಿ ನೀವು ಯಾಕೆ ಪ್ರಶ್ನಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಜೊತೆಗೆ ಲಸಿಕೆ ವಿಚಾರದಲ್ಲಿ ಕುಮಾರಸ್ವಾಮಿ ಅವರು ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿಪಕ್ಷವನ್ನಲ್ಲ ಎಂಬ ಅಭಿಪ್ರಾಯ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿದೆ.

ಇದನ್ನೂ ಓದಿ: ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...